ವಸತಿಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಸೂಚನೆ

Progress review meeting
ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ವಿಧಾನಮಂಡಲದ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ತನ್ವೀರ್​ ಸೇಠ್​ಮಾತನಾಡಿದರು.
Published on: 

ಉಡುಪಿ: ವಸತಿಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಪೋಷಕರು ಮಕ್ಕಳನ್ನು ವಿಶ್ವಾಸದಿಂದ ಕಳುಹಿಸುತ್ತಾರೆ. ವಿದ್ಯಾರ್ಥಿಗಳ ಜವಾಬ್ದಾರಿ ತೆಗೆದುಕೊಂಡು ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಬೇಕು ಎಂದು ವಿಧಾನಮಂಡಲದ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ತನ್ವೀರ್​ ಸೇಠ್​ ಹೇಳಿದರು.

ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಸಮುದಾಯದವರ ಕಲ್ಯಾಣ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದೆ. ಇಲ್ಲಿ ಶೈಕ್ಷಣಿಕ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ, ಹೊರಜಿಲ್ಲೆಗಳಿಂದ ವ್ಯಾಸಾಂಗಕ್ಕಾಗಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿ, ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಉಳಿದುಕೊಂಡು ಶಿಕ್ಷಣ ಪಡೆಯುತ್ತಿದ್ದಾರೆ. ಅಧಿಕಾರಿಗಳು ಹಾಗೂ ಹಾಸ್ಟೆಲ್​ ಸಿಬ್ಬಂದಿ ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕು ಎಂದರು.

ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಹಾಸ್ಟೆಲ್​ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಹಾಸ್ಟೆಲ್​ಗಳಲ್ಲಿ ಸೀಟು ಸಿಗುತ್ತಿಲ್ಲ ಎಂಬ ದೂರುಗಳು ಇವೆ. ಇದನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು. ಬೇಡಿಕೆಗೆ ಅನುಗುಣವಾಗಿ ಹಾಸ್ಟಲ್​ಗಳಲ್ಲಿ ಸೀಟುಗಳು ಲಭ್ಯವಾಗುವಂತೆ ಕ್ರಮವಹಿಸಬೇಕು ಎಂದರು.

ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಹಾಸ್ಟೆಲ್​ಗಳು ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಬಿಸಿ ನೀರು, ಊಟೋಪಹಾರ, ಸ್ವಚ್ಛತೆ, ಸೋಪ್​ ಕಿಟ್​ ಸೇರಿದಂತೆ ಮತ್ತಿತರ ಮೂಲಭೂತ ಸೌಲಭ್ಯಗಳು ಸಕಾಲಕ್ಕೆ ದೊರೆಯುವಂತೆ ನೋಡಿಕೊಳ್ಳಬೇಕು. ಹಾಸ್ಟೆಲ್​ಗಳಲ್ಲಿ ವಾರ್ಡನ್​, ರಾತ್ರಿ ಕಾವಲುಗಾರ ಹಾಗೂ ಸಿಬ್ಬಂದಿ ಕೊರತೆ ಇದೆ. ಹೊಸದಾಗಿ ವಿದ್ಯಾರ್ಥಿನಿಲಯಗಳನ್ನು ನಿಮಾರ್ಣ ಮಾಡುವಾಗ ಬೆಳಕಿನ ವ್ಯವಸ್ಥೆ, ಪ್ಯಾನ್​, ಬಿಸಿ ನೀರು, ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು ಎಂದರು.

ವಿಧಾನಪರಿಷತ್ತಿನ ಸದಸ್ಯ ಕೇಶವ ಪ್ರಸಾದ್​ ಎಸ್​. ಮಾತನಾಡಿ, ಜಿಲ್ಲೆಯು ಉತ್ತಮ ಫಲಿತಾಂಶ ಹೊಂದಲು ಕಾರಣವಾದ ಪ್ರಮುಖ ಅಂಶಗಳೇನು ಎಂಬುದನ್ನು ಮನಗಾಣಬೇಕು. ಮುಸ್ಲಿಂ, ಕ್ರಿಶ್ಚಿಯನ್​ ಸಹಿತ ಎಲ್ಲಾ ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರ ಯೋಜನೆಗಳು ತಲುಪಿಸಲು ಪ್ರಯತ್ನಿಸಬೇಕು ಎಂದರು.

ಶಾಸಕ ಚನ್ನಬಸಪ್ಪ ಮಾತನಾಡಿ, ವಿದ್ಯಾಭ್ಯಾಸಕ್ಕಾಗಿ ಉತ್ತರ ಕರ್ನಾಟಕ ಸೇರಿದಂತೆ ಹೊರ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಹಾಸ್ಟೆಲ್​ ಗಳಲ್ಲಿ ದಾಖಲಾಗುತ್ತಾರೆ. ವಿದ್ಯಾರ್ಥಿಗಳಿಗೆ ಅನುಗುಣವಾಗಿ ಹಾಸ್ಟಲ್​ಗಳಲ್ಲಿ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಬೇಕು. ಯಾವ ಜಿಲ್ಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ತೆರಳುತ್ತಾರೋ ಅಂತಹ ಜಿಲ್ಲೆಗಳಲ್ಲಿ ಹಾಸ್ಟೆಲ್​ಗಳ ನಿಮಾರ್ಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ವಿಧಾನಸಭೆ ಸದಸ್ಯ ಹೆಚ್​.ಎ ಇಕ್ಬಾಲ್​ ಹುಸೇನ್​ ಮಾತನಾಡಿ, ಜಿಲ್ಲೆಯಲ್ಲಿ ಖಾಸಗಿ ದಾನಿಗಳು ಹೆಚ್ಚು ಕೊಡುಗೆ ನೀಡುತ್ತಾರೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವ ಸಣ್ಣ ಸಣ್ಣ ಶಾಲೆಗಳನ್ನು ಒಟ್ಟುಗೂಡಿಸಿ, ಈ ಶಾಲೆಗಳ ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ವಿದ್ಯಾಭ್ಯಾಸ ಕಲ್ಪಿಸಬೇಕು ಎಂದದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಯಲ್ಲಿ ಸರ್ಕಾರದ ಜೊತೆಗೆ ಹೆಚ್ಚಾಗಿ ಖಾಸಗಿ ದಾನಿಗಳು ಸಿ.ಆರ್​.ಎಸ್​ ಅನುದಾನ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಪ್ರೇರಿತವಾಗಿ ಮುಂದೆ ಬರುತ್ತಾರೆ. ಶಾಲೆಯ ಹಳೆಯ ವಿದ್ಯಾರ್ಥಿಗಳು ಸಹಾಯಹಸ್ತ ನೀಡುತ್ತಾರೆ. ನಿವೃತ್ತಿ ಹೊಂದಿದ ಶಿಕ್ಷಕರೂ ವಿದ್ಯಾರ್ಥಿಗಳ ಕಲಿಕೆಗೆ ಮುಂದಾಗುತ್ತಾರೆ. ದಾನಿಯೊಬ್ಬರು 29 ಸರ್ಕಾರಿ ಶಾಲೆಗಳ ಶೌಚಾಲಯ ಶುಚಿತ್ವಕ್ಕೆ ಸಹಾಯ ನೀಡಿದ್ದಾರೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್​ ಬಾಯಲ್​ ಮಾತನಾಡಿದರು. ಸಭೆಯಲ್ಲಿ ವಿಧಾನಸಭೆ ಸದಸ್ಯರಾದ ಕಟಕದೊಂಡ ವಿಠ್ಠಲ್​ ದೊಂಡಿಬಾ, ಬಿ.ಪಿ.ಹರೀಶ್​, ರಾಜೇಶ್​ ನಾಯಕ್​ ಹಾಗೂ ಕರೆಮ್ಮ ಜಿ. ನಾಯ್ಕ, ವಿಧಾನಪರಿಷತ್ತಿನ ಸದಸ್ಯರಾದ ಕೆ ಅಬ್ದುಲ್​ ಜಬ್ಬರ್​, ಇಲಾಖೆ ಕಾರ್ಯದರ್ಶಿ ಡಾ. ಎನ್​.ವಿ. ಪ್ರಸಾದ್​, ಆಯುಕ್ತರಾದ ಸುರಳ್ಕರ್​ ವಿಕಾಸ್​ ಕಿಶೋರ್​, ಜಂಟಿ ಕಾರ್ಯದರ್ಶಿ ಶಿವರಾಮಾಚಾರಿ ಮತ್ತಿತರರು ಉಪಸ್ಥಿತರಿದ್ದರು.