

ಉಡುಪಿ: ಕರ್ನಾಟಕದ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿ ನ.1ರಂದು ಆಚರಿಸುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಅ.16) ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 71ನೇ ರಾಜ್ಯೋತ್ಸವವು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಬೋರ್ಡ್ ಹೈಸ್ಕೂಲ್ನ ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಲಿದೆ. ಕರ್ನಾಟಕದ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಕುರಿತು ಜಾಗೃತಿ ಮೂಡಿಸುವ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಸಾಗಲಿವೆ ಎಂದರು.
ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್ಎಸ್ಎಸ್, ಎನ್ಸಿಸಿ ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದೆ. ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಅಗತ್ಯವಿರುವ ಪೂರ್ವ ತಯಾರಿಗಳನ್ನು ಮೂರು ದಿನ ಮುಂಚಿತವಾಗಿ ಮಾಡಿಕೊಳ್ಳಬೇಕು. ಶಿಷ್ಟಾಚಾರದಂತೆ ಜನಪ್ರನಿಧಿಗಳು, ಗಣ್ಯರನ್ನು ಆಹ್ವಾನಿಸಬೇಕು. ಕಾರ್ಯಕ್ರಮದ ಯಶಸ್ಸಿಗೆ ರಚಿಸಿರುವ ಸಮಿತಿಗೆ ನೀಡಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ, ನಗರಸಭಾ ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.