

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆಯಲ್ಲಿ ಎಲ್‌ಪಿಜಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ಶನಿವಾರ ಮಧ್ಯರಾತ್ರಿ ಸುಮಾರು 12 ಗಂಟೆಗೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿನತ್ತ ಎಲ್‌ಪಿಜಿ ಸಾಗಿಸುತ್ತಿದ್ದ ಲಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಳಿಕ ಉರುಳಿದೆ. ಚಾಲಕ ಪಪ್ಪು ಚೌಹಾನ್ ಲಾರಿಯೊಳಗೆ ಸಿಲುಕಿಕೊಂಡಿದ್ದರು. ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅವರು ಅಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಂಟ್ವಾಳ ಟ್ರಾಫಿಕ್ ಠಾಣೆಯ ಎಸ್‌ಐ ಆದರ್ಶ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ತೆರಳಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿತು. ಕ್ರೇನ್ ಸಹಾಯದಿಂದ ಪಲ್ಟಿಯಾದ ಲಾರಿ ತೆರವುಗೊಳಿಸಿ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಲಾಯಿತು.