ಉಡುಪಿ: ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಡಿ.3ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಮಟ್ಟದಲ್ಲಿ ವಿಶ್ವ ವಿಕಲಚೇತನರ ದಿನ ಆಚರಿಸಲಾಗುತ್ತಿದೆ. ಅರ್ಥಪೂರ್ಣವಾಗಿ, ವ್ಯವಸ್ಥಿತ ರೀತಿಯಲ್ಲಿ ಕಾರ್ಯಕ್ರಮ ನಡೆಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚಿಸಿದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ವಿಕಲಚೇತನ ಮಕ್ಕಳು ಸಿದ್ಧಪಡಿಸಿರುವ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ಮಕ್ಕಳನ್ನು ಹಾಗೂ ವಿಕಲಚೇತನರನ್ನು ಕರೆತರುವಲ್ಲಿ ವಿಶೇಷ ಶಾಲೆಗಳ ಮುಖ್ಯಸ್ಥರು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಸೂಕ್ತ ಕ್ರಮವಹಿಸಬೇಕು ಎಂದರು.
ದಿನಾಚರಣೆಗೂ ಮುನ್ನ ಅವರಿಗೆ ಕ್ರೀಡಾಕೂಟ ಆಯೋಜಿಸಿ, ವಿಜೇತರಿಗೆ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಬೇಕು. ವಿಕಲಚೇತನರಿಗೆ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರು, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ವಿಶೇಷ ಸಾಧನೆ ಮಾಡಿದ ವಿಕಲಚೇತನರನ್ನು ಕಾರ್ಯಕ್ರಮದ ದಿನ ಸನ್ಮಾನಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ., ಕಲ್ಯಾಣಿ ಕಲಾ ಕೇಂದ್ರದ ನಿರಂಜನ ಭಟ್, ವಿಕಲಚೇತನರ ಸ್ವಯಂಸೇವಾ ಸಂಸ್ಥೆಗಳ ಹಾಗೂ ಪುನರ್ವಸತಿ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.