

ಉಡುಪಿ: ಬಿಜೆಪಿ ಯುವ ಮೋರ್ಚಾ ನೆಲೆಯಲ್ಲಿ ರಶ್ಮಿ ಸಾಮಂತ ಅವರ ಮೂಲಕ ಉಡುಪಿ ಜಿಲ್ಲೆಗೆ ರಾಷ್ಟ್ರೀಯ ಮಟ್ಟದಲ್ಲಿ ನಾಯಕತ್ವ ದೊರೆತಿರುವುದು ಹೆಮ್ಮೆಯ ಸಂಗತಿ. ಇದು ಜಿಲ್ಲೆಯಲ್ಲಿ ಯುವ ಮಹಿಳಾ ಸಂಘಟನೆಗೆ ಹೆಚ್ಚಿನ ಶಕ್ತಿ ಲಭಿಸಿದಂತಾಗಿದ್ದು, ಯುವ ಮಹಿಳಾ ಶಕ್ತಿಯ ಕ್ರೋಡೀಕರಣಕ್ಕೆ ನಾಂದಿ ಹಾಡುವಂತಾಗಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ ಶೆಟ್ಟಿ ಆಶಯ ವ್ಯಕ್ತಪಡಿಸಿದರು.
ಉಡುಪಿಯ ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಗೆ ಗುರುವಾರ (ಅ.22) ಭೇಟಿ ನೀಡಿದ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆಯಾಗಿ ನೇಮಕಗೊಂಡ ಯುವ ಚಿಂತಕಿ ಹಾಗೂ ಲೇಖಕಿ ರಶ್ಮಿ ಸಾಮಂತ ಮಣಿಪಾಲ ಅವರನ್ನು ಸನ್ಮಾನಿಸಿ ಮಾತನಾಡಿದರು.
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ ಶೆಟ್ಟಿ ಬಿಲ್ಲಾಡಿ ಮಾತನಾಡಿ, ರಶ್ಮಿ ಅವರು ಉಡುಪಿ ಮೂಲದಿಂದ ರಾಷ್ಟ್ರೀಯ ಮಟ್ಟದಲ್ಲಿ ಆಯ್ಕೆಯಾಗಿರುವುದು ಸಂತಸ ತಂದಿದೆ. ಅವರ ನೇತೃತ್ವದಲ್ಲಿ ಜಿಲ್ಲೆಯ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಯುವ ಮೋರ್ಚಾದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಸಂಘಟಿತ ಪ್ರಯತ್ನ ಮಾಡೋಣ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ ನಾಯಕ, ಉಡುಪಿ ನಗರಾಧ್ಯಕ್ಷ ದಿನೇಶ ಅಮೀನ್ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ, ಜಿಲ್ಲಾ ಕಾರ್ಯದರ್ಶಿಗಳಾದ ಗಿರೀಶ ಎಂ. ಅಂಚನ್, ಶಿವಕುಮಾರ ಅಂಬಲಪಾಡಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದಿಪ ಕುಂದರ, ಅಭಿರಾಜ ಸುವರ್ಣ, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷ ಕಿಶೋರ ಕರಂಬಳ್ಳಿ, ಕಾರ್ಯದರ್ಶಿ ಗುರುರಾಜ ಭಂಡಾರಿ, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ಪ್ರಧಾನ ಕಾರ್ಯದರ್ಶಿ ನಿತಿನ್ ಪೈ ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.