20 ಸಾವಿರ ವಿದ್ಯಾರ್ಥಿಗಳಿಗೆ ಪೆನ್​ ಕೊಡುಗೆ

ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ.
ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ.
Published on: 

* ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಮಾಹಿತಿ

* ನ.14ರ ಮಕ್ಕಳ ದಿನಾಚರಣೆ ನಿಮಿತ್ತ ವಿತರಣೆ

ಉಡುಪಿ: ದೇಶದ ಮುಂದಿನ ಭವಿಷ್ಯ ರೂಪಿಸಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ನಿಮಿತ್ತ ಕಳೆದ ವರ್ಷದಂತೆ ಈ ವರ್ಷವೂ ಸಹ ಉಡುಪಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜ್​ನ ಸುಮಾರು 20 ಸಾವಿರ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವೆಚ್ಚದಲ್ಲಿ ನ.14ರಂದು ಪೆನ್​ ಉಡುಗೊರೆ ನೀಡುತ್ತಿರುವುದಾಗಿ ಶಾಸಕ ಯಶ್​ಪಾಲ್​ ಸುವರ್ಣ ತಿಳಿಸಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದ 127 ಶಾಲಾ-ಕಾಲೇಜ್​ಗಳಿಗೆ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ತೆರಳಿ ವಿದ್ಯಾರ್ಥಿಗಳಿಗೆ ಪೆನ್​ ವಿತರಿಸಲಿದ್ದಾರೆ.

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ

ಉಡುಪಿ ಜಿಲ್ಲೆ ಶಿಕ್ಷಣ ವ್ಯವಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರಿ ಶಾಲಾ-ಕಾಲೇಜ್​ಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರಿ ಅನುದಾನದೊಂದಿಗೆ ಅನೇಕ ಕಂಪನಿಗಳ ಸಿಎಸ್​ಆರ್​ ನಿಧಿ ಹಾಗೂ ದಾನಿಗಳ ಸಹಕಾರದಿಂದ ಗುಣಮಟ್ಟದ ಶಿಕ್ಷಣ ಕೊಡಿಸಲು ಶಾಸಕನ ನೆಲೆಯಲ್ಲಿ ವಿಶೇಷ ಆದ್ಯತೆ ನೀಡಿ ಕಾರ್ಯಪ್ರವೃತ್ತವಾಗಿದ್ದೇನೆ ಎಂದು ತಿಳಿಸಿದ್ದಾರೆ.

ಪ್ರತಿವರ್ಷ ಶಾಲಾರಂಭದ ದಿನದಂದೂ ಸಹ ಉಡುಪಿ ವಿಧಾನಸಭಾ ಕ್ಷೇತ್ರದ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ಸ್ವಾಗತಿಸುವ ಕಾರ್ಯಕ್ರಮ ಮಾಡಲಾಗುತ್ತಿದೆ. ಹಲವು ವರ್ಷದಿಂದ ಮಹಾಲಕ್ಷ್ಮೀ ಕೋ-ಆಪರೇಟಿವ್​ ಬ್ಯಾಂಕ್​, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್​ ಹಾಗೂ ಪುಷ್ಪಾನಂದ ಫೌಂಡೇಷನ್​ ಈ ಮೂರು ಸಂಸ್ಥೆಗಳ ಮೂಲಕವೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುವ ಕಾರ್ಯ ನಿರಂತರ ನಡೆಯುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.