

ಉಡುಪಿ: ಮಕ್ಕಳ ರಕ್ಷಣೆ ಕೇವಲ ಒಂದು ಇಲಾಖೆಗೆ ಸಂಬಂಧಪಟ್ಟ ವಿಚಾರವಲ್ಲ. ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಆದ್ದರಿಂದ ನಿರಂತರ ತರಬೇತಿ ಕಾರ್ಯಕ್ರಮ ಅಗತ್ಯ ಎಂದು ರಾಜ್ಯ ಮಕ್ಕಳ ಘಟಕಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಜಿಪಂ ಸಭಾಂಗಣದಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಅಪರಾಧ ಘಟಿಸಿದಾಗ ಮಕ್ಕಳ ಮನಸ್ಥಿತಿಯ ಬಗ್ಗೆ ಯೋಚಿಸಬೇಕಾಗುತ್ತದೆ. ಅಪರಾಧಕ್ಕೆ ಕಾರಣವಾದ ಹಿನ್ನೆಲೆ ಬಗ್ಗೆ ತಿಳಿದುಕೊಳ್ಳಬೇಕಾಗುತ್ತದೆ. ಮಕ್ಕಳ ಮೇಲೆ ಅಥವಾ ಮಕ್ಕಳಿಂದ ಅಪರಾಧ ನಡೆದಾಗ ಸಕಾಲದಲ್ಲಿ ಸಕಾರಾತ್ಮಕ ಸ್ಪಂದನೆ ನೀಡಿ ಕಾನೂನಿನ ಸಂಘರ್ಷ ತಪ್ಪಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರೇಮ ಮೂರ್ತಿ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಎಲ್ಲ ಇಲಾಖೆಗಳ ಜವಾಬ್ದಾರಿಯಾಗಿದೆ. ಸುಮಾರು 47 ಇಲಾಖೆಗಳು ನೇರ ಅಥವಾ ಪರೋಕ್ಷವಾಗಿ ಮಕ್ಕಳ ರಕ್ಷಣೆ ಸಂಬಂಧಿಸಿ ಜವಾಬ್ದಾರರಾಗಿರುತ್ತದೆ. ಯಾವುದೇ ಯೋಜನೆಗಳನ್ನು ಅನುಷ್ಠಾನ ಮಾಡುವಾಗ ಮಕ್ಕಳ ಹಿತರಕ್ಷಣೆ ದೃಷ್ಟಿಯಿಂದ ಕಾರ್ಯನಿರ್ವಹಿಸಬೇಕಾಗುತ್ತದೆ. ಮಕ್ಕಳ ಹಕ್ಕುಗಳ ರಕ್ಷಣೆಗೆ 30 ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಗಳ ಸಮರ್ಪಕ ಜಾರಿಗಾಗಿ ಎಲ್ಲ ಇಲಾಖೆಗಳು ಕೈ ಜೋಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕುಂದಾಪುರ ಡಿ.ವೈ.ಎಸ್.ಪಿ. ಎಚ್.ಡಿ ಕುಲಕರ್ಣಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಅಶ್ವಿತಾ ಶಾಲೆಟ್, ಮಂಗಳೂರು ಪಡಿ ಸಂಸ್ಥೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೆನಿ ಪೀಟರ್ ಡಿ'ಸೋಜ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಸಿ, ಮಕ್ಕಳ ಸಹಾಯವಾಣಿ ಯೋಜನಾ ಸಂಯೋಜಕಿ ಜ್ಯೋತಿ ನಿರೂಪಿಸಿ ವಂದಿಸಿದರು.