ಜನ ಬಿಜೆಪಿಗರ ಮನೆಗೆ ನುಗ್ಗುವ ಪರಿಸ್ಥಿತಿ ಬರಲಿದೆ: ಕಿಶನ್​ ಹೆಗ್ಡೆ ಕೊಳ್ಕೆಬೈಲ್

ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್​ ಕುಮಾರ್​ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್​ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ
congress protest
ಜಿಲ್ಲಾ ಕಾಂಗ್ರೆಸ್​ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಕಿಶನ್​ ಹೆಗ್ಡೆ ಕೊಳ್ಕೆಬೈಲ್​ ಮಾತನಾಡಿದರು.
Published on: 

ಉಡುಪಿ: ಎಸ್​ಐಆರ್​ ವಿಚಾರದಲ್ಲಿ ಕೇಂದ್ರ ಚುನಾವಣಾ ಆಯೋಗದ ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಬಿಜೆಪಿ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ಜನವಿರೋಧಿ ಕೆಲಸ ಮಾಡುತ್ತಿದೆ. ಇದೇ ರೀತಿ ಮುಂದುವರಿದರೆ ಜನರು ಬಿಜೆಪಿಗರ ಮನೆಗೆ ನುಗ್ಗುವ ಪರಿಸ್ಥಿತಿ ಬರಲಿದೆ ಎಂದು ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಕಿಶನ್​ ಹೆಗ್ಡೆ ಕೊಳ್ಕೆಬೈಲ್​ ಹೇಳಿದ್ದಾರೆ.

ಸೋಮವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್​ ಕುಮಾರ್​ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್​ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಜ್ಞಾನೇಶ್​ ಕುಮಾರ್​ ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕ್ರಿಮಿನಲ್​ ಪ್ರಕರಣ ದಾಖಲಿಸಿ ಬಂಧಿಸಬೇಕು. ಇಲ್ಲದಿದ್ದರೆ ಈ ಹೋರಾಟವನ್ನು ತಾಲೂಕು ಹಾಗೂ ಗ್ರಾಮೀಣ ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್​ ಮಾತನಾಡಿ, ಎಸ್​ಐಆರ್​ ಮೂಲಕ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿಸುವ ಪ್ರಯತ್ನ ನಡೆಯುತ್ತಿದೆ. ಬಡವರು, ಕಾರ್ಮಿಕರು, ಆದಿವಾಸಿಗಳು, ಅಲೆಮಾರಿಗಳು, ದಲಿತರು ಹಾಗೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ದೂರಿದರು. ಓಟು ಚೋರಿ ಮೂಲಕ ಚುನಾವಣೆಯಲ್ಲಿ ಗೆಲ್ಲುವುದು ಬಿಜೆಪಿ ಹುನ್ನಾರ ಎಂದು ಆರೋಪಿಸಿದರು.

ಮಾಜಿ ಶಾಸಕ ಗೋಪಾಲ ಪೂಜಾರಿ, ಕೆಪಿಸಿಸಿ ವಕ್ತಾರೆ ವರೋನಿಕಾ ಕರ್ನೆಲಿಯೋ ಹಾಗೂ ಎನ್​ಎಸ್​ಯುಐ ಜಿಲ್ಲಾಧ್ಯಕ್ಷ ಸೌರಭ್​ ಬಲ್ಲಾಳ್​ ಮಾತನಾಡಿದರು. ಪ್ರತಿಭಟನೆಯಲ್ಲಿ ಪ್ರಸಾದ್​ರಾಜ್​ ಕಾಂಚನ್​, ದಿನೇಶ್​ ಹೆಗ್ಡೆ ಕೊಳ್ಕೆಬೈಲು, ಅಶೋಕ್​ ಕುಮಾರ್​ ಕೊಡವೂರು, ಪ್ರಶಾಂತ್​ ಜತ್ತನ್ನ, ಪ್ರಖ್ಯಾತ್​ ಶೆಟ್ಟಿ, ಹರಿಪ್ರಸಾದ್​ ರೈ, ಜ್ಯೋತಿ ಹೆಬ್ಬಾರ್​, ಹಬೀಬ್​ ಅಲಿ, ಶಬ್ಬೀರ್​ ಉಡುಪಿ, ಶೇಕ್​ ವಾಹೀದ್​, ಇಸ್ಮಾಯಿಲ್​ ಆತ್ರಾಡಿ, ಎಂ.ಪಿ. ಮೊದಿನಬ್ಬ, ಅಬ್ದುಲ್​ ಅಝೀಜ್​ ಹೆಜಮಾಡಿ, ಹರೀಶ್​ ಕಿಣಿ, ಗಣೇಶ್​ ನೆರ್ಗಿ, ರಿಯಾಝ್ ಕೋಡಿ, ರಾಜು ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಭಟನಕಾರರು ಜ್ಞಾನೇಶ್​ ಕುಮಾರ್​, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಗೇಟ್​ಗಳನ್ನು ಬಂದ್​ ಮಾಡಿ ತಡೆದರು. ಕೆಲ ಕಾರ್ಯಕರ್ತರು ಗೇಟ್​ ಹತ್ತಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್​ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಕಿಶನ್​ ಹೆಗ್ಡೆ ಕೊಳ್ಕೆಬೈಲ್​ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net