ಉಡುಪಿ: ಕಳೆದ ಮೂರು ತಿಂಗಳಲ್ಲಿ ಮೂರು ಬಾರಿ ವಾಣಿಜ್ಯ ಗ್ಯಾಸ್ ಬೆಲೆ ಏರಿಸಲಾಗಿದೆ. ಈ ಬಾರಿ 993 ರೂ.ಏರಿಸಿದ್ದು ಸಾರ್ವಕಾಲಿಕ ದಾಖಲೆಯಾಗಿದೆ. ಯುದ್ಧದ ನೆಪ ಹೇಳಿ ಏಕಾಏಕಿ ಬೆಲೆ ಏರಿಸುವ ಮೂಲಕ ಕೇಂದ್ರ ಸರ್ಕಾರ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ ನೀಡಿದೆ. ಅನೇಕ ಹೋಟೆಲ್ಗಳು ಬಂದ್ ಆಗಿದ್ದು, ನೂರಾರು ಮಂದಿ ನಿರುದ್ಯೋಗಿಗಳಾಗಿದ್ದಾರೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಆರೋಪಿಸಿದರು.
ವಾಣಿಜ್ಯ ಗ್ಯಾಸ್ ದರ ತೀವ್ರ ಏರಿಕೆ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಬ್ರಹ್ಮಗಿರಿ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ದಿನಬಳಕೆ ವಸ್ತುಗಳ ಬೆಲೆಏರಿಕೆ ಜೊತೆಗೆ ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಹಿಂದಿನ ಎಲ್ಲಾ ಸರ್ಕಾರಗಳು ಬೆಲೆ ನಿಯಂತ್ರಣಕ್ಕೆ ವಿಶೇಷ ಕ್ರಮಗಳನ್ನು ಕೈಗೊಂಡಿದ್ದವು. ಆದರೆ ಮೋದಿ ಸರ್ಕಾರ ಸುಮ್ಮನೆ ಕುಳಿತಿದೆ. ಈ ಬಗ್ಗೆ ಪ್ರತಿಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಜ್ಯೋತಿ ಹೆಬ್ಬಾರ್, ಮುಖಂಡರಾದ ಹರೀಶ್ ಕಿಣಿ, ಸತೀಶ್ ಕೊಡವೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು ಮೊದಲಾದವರು ಉಪಸ್ಥಿತರಿದ್ದರು.