ಪ್ರತಿಭಟನಾಕಾರರ ವಿರುದ್ಧ ಸರ್ಕಾರದ ದೌರ್ಜನ್ಯ ಖಂಡನೀಯ: ಗಫೂರ್

ಜಿಲ್ಲಾ ಕಾಂಗ್ರೆಸ್​ ಸಮಿತಿ ವತಿಯಿಂದ ಬ್ರಹ್ಮಗಿರಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾ ಕಾಂಗ್ರೆಸ್​ ಸಮಿತಿ ವತಿಯಿಂದ ಬ್ರಹ್ಮಗಿರಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
Published on
ಉಡುಪಿ: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ಕಾಂಗ್ರೆಸ್​ ನಾಯಕರ ಮೇಲಿನ ದೌರ್ಜನ್ಯವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಜನಸಾಮಾನ್ಯರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್​ ಹೇಳಿದರು.
ನೀಟ್​ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸ್​ ದೌರ್ಜನ್ಯ ಖಂಡಿಸಿ ಜಿಲ್ಲಾ ಕಾಂಗ್ರೆಸ್​ ಸಮಿತಿ ವತಿಯಿಂದ ಬ್ರಹ್ಮಗಿರಿ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಘಟನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು. ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಎನ್​ಎಸ್​ಯುಐ ಜಿಲ್ಲಾ ಅಧ್ಯಕ್ಷ ಸೌರಭ್​ ಬಲ್ಲಾಳ್​ ಮಾತನಾಡಿ, ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಲುಕ್​ ಅವರನ್ನು ಆಸ್ಪತ್ರೆಗೆ ಸೇರಿಸಿ ಬಲವಂತವಾಗಿ ಪ್ರತಿಭಟನೆ ಮೊಟಕುಗೊಳಿಸುವಂತೆ ಮಾಡಲಾಗಿದೆ. ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಹಕ್ಕು ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು, ಜಿಲ್ಲಾ ಕಾಂಗ್ರೆಸ್​ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್​ ಕಿಣಿ, ಉಡುಪಿ ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ರಮೇಶ್​ ಕಾಂಚನ್​, ಕಿಶನ್​ ಹೆಗ್ಡೆ ಕೊಳ್ಕೆಬೈಲ್​, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ, ಪ್ರಖ್ಯಾತ್​ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಪ್ರತಿಭಟನೆಯ ವೇಳೆ ಕಾರ್ಯಕರ್ತರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು. ರಸ್ತೆ ತಡೆ ನಡೆಸಲು ಯತ್ನಿಸಿದ ಕೆಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net