ಪೌರ ಕಾರ್ಮಿಕರಿಗೆ ಕಾಲಮಿತಿಯಲ್ಲಿ ವೇತನ: ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಮಾತನಾಡಿದರು.
ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಮಾತನಾಡಿದರು.
Published on
ಉಡುಪಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸ್ಥಳಿಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೇತನ ಸಹಿತ ಇತರ ಸೌಲಭ್ಯಗಳನ್ನು ವಿಳಂಬವಿಲ್ಲದೇ ಪ್ರತಿ ತಿಂಗಳು ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರ ಸ್ಥಳಿಯ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಲೋಡರ್​, ಕ್ಲೀನರ್ಸ್​ ಹಾಗೂ ವಾಹನ ಚಾಲಕರಿಗೆ ಪ್ರತಿ ತಿಂಗಳು ಪಿ.ಎಫ್​ ಹಾಗೂ ಇ.ಎಸ್​.ಐ. ಪಾವತಿ ಖಾತ್ರಿ ಪಡಿಸಿಕೊಂಡು ಹೊರ ಗುತ್ತಿಗೆದಾರರಿಗೆ ಮಾಸಿಕ ಬಿಲ್​ಗಳನ್ನು ಪಾವತಿಸಬೇಕು. ಕುಟುಂಬದ ಅವಲಂಬಿತರಿಗೆ ಗುರುತಿನ ಚೀಟಿ ನೀಡುವ ಜೊತೆಗೆ ಸರ್ಕಾರದ ವಿವಿಧ ಸೌಲಭ್ಯಗಳು, ಪುನರ್ವಸತಿ ಯೋಜನೆಗಳನ್ನು ಕಲ್ಪಿಸಬೇಕು ಎಂದರು.
ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್​ ಹಾಗೂ ಜೆಟ್ಟಿಂಗ್​ ಯಂತ್ರಗಳ ಬಳಕೆಯೊಂದಿಗೆ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು. ಮಲ ತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕ ರೀತಿಯಲ್ಲಿ ಎಫ್​.ಎಸ್​.ಎಂ.ಎಸ್​ ಘಟಕಗಳಲ್ಲಿ ವಿಲೇವಾರಿ ಮಾಡಬೇಕು. ಜಿಲ್ಲೆಯಲ್ಲಿ ಕೈಗೊಂಡಿರುವ ಎಫ್​.ಎಸ್​.ಎಂ.ಎಸ್​ ಘಟಕ ಯೋಜನೆಗಳ ಕಾಮಗಾರಿಗಳನ್ನು ಶ್ರೀ ಪೂರ್ಣಗೊಳಿಸಬೇಕು ಎಂದರು.
ಸಫಾಯಿ ಕರ್ಮಚಾರಿಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್​ ಹೆಲ್ತ್​ ಚೆಕ್​ಅಪ್​ ಮಾಡಿಸಬೇಕು. ಅಗತ್ಯವಿದ್ದಲ್ಲಿ ಉನ್ನತ ಚಿಕಿತ್ಸೆಗಳನ್ನು ಸಹ ಕೊಡಿಸಬೇಕು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಪೌರ ಕಾರ್ಮಿಕರ ಮಕ್ಕಳಿಗೆ ಶೇ. 5 ರ ಪ್ರವೇಶ ನೀಡಲು ಕಾರ್ಯಪ್ರವೃತ್ತರಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್​ ಅಧೀಕ್ಷಕ ಹರಿರಾಮ್​ ಶಂಕರ್​, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್​.ಎಸ್​. ಕಾದ್ರೋಳ್ಳಿ, ಸಹಾಯಕ ಕಮೀಷನರ್​ ರಶ್ಮಿ ಎಸ್​.ಆರ್​, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net