ಶಾಲಾ ವಾಹನಗಳ ತಪಾಸಣೆ; 203 ವಾಹನಗಳ ವಿರುದ್ಧ ಪ್ರಕರಣ ದಾಖಲು

ಪೊಲೀಸರು ಶಾಲಾ ಬಸ್​ಗಳ ತಪಾಸಣೆ ನಡೆಸಿದರು.
ಪೊಲೀಸರು ಶಾಲಾ ಬಸ್​ಗಳ ತಪಾಸಣೆ ನಡೆಸಿದರು.
Published on
ಉಡುಪಿ: ಇತ್ತೀಚೆಗೆ ಶಾಲಾ ಬಸ್​ಗಳ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಉಡುಪಿ ಹಾಗೂ ಮಣಿಪಾಲ ಪೊಲೀಸ್​ ಠಾಣೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಪೊಲೀಸರು ಶಾಲಾ ಬಸ್​ಗಳ ತಪಾಸಣೆ ನಡೆಸಿದರು.
ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಸಾರಿಗೆ ಇಲಾಖೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ನಿಯಮ ಉಲ್ಲಂಘಿಸಿದ ಶಾಲಾ ವಾಹನಗಳಿಗೆ ಭಾರಿ ದಂಡ ವಿಧಿಸಲಾಗಿದೆ. ಒಟ್ಟು 483 ಶಾಲಾ ವಾಹನಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದ್ದು, ಈ ಪೈಕಿ ನಿಯಮ ಉಲ್ಲಂಘಿಸಿದ 203 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಒಟ್ಟು 71,000 ರೂ. ದಂಡ ವಸೂಲಿ ಮಾಡಲಾಗಿದೆ. ಅತಿ ಹೆಚ್ಚು ಮಕ್ಕಳನ್ನು ಕರೆದೊಯ್ಯುತ್ತಿದ್ದ 112 ವಾಹನಗಳು, ಸೂಕ್ತ ಯೂನಿಫಾಮ್​ರ್ ಧರಿಸದೇ ವಾಹನ ಚಲಾಯಿಸುತ್ತಿದ್ದ 58 ಚಾಲಕರಿಗೆ ದಂಡ ಹಾಕಲಾಗಿದೆ. ಫಿಟ್​ನೆಸ್​ ಪ್ರಮಾಣಪತ್ರ, ವಿಮೆ ಹಾಗೂ ಇತರೆ ದಾಖಲೆಗಳ ಕೊರತೆ ಹೊಂದಿದ್ದ 33 ವಾಹನ ಮಾಲೀಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ತಪಾಸಣೆ ವೇಳೆ ಶಾಲಾ ವಾಹನಗಳಲ್ಲಿ ಕಡ್ಡಾಯ ಸುರಕ್ಷತಾ ನಿಯಮ ಪಾಲನೆ ಹಾಗೂ ವಾಹನಗಳಲ್ಲಿ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ಸಾಗಿಸಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದರು. ಚಾಲಕರ ಚಾಲನಾ ಪರವಾನಗಿ, ವಾಹನದ ಫಿಟ್​ನೆಸ್​ ಪ್ರಮಾಣಪತ್ರ, ವಿಮೆ , ಆರ್​ಟಿಒ ಪರ್ಮಿಟ್​ ಸೇರಿದಂತೆ ಅಗತ್ಯ ದಾಖಲೆಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಯಿತು.
ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಶಾಲಾ ವಾಹನಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದು, ಶಾಲಾ ಆಡಳಿತ ಮಂಡಳಿಗಳು ಹಾಗೂ ವಾಹನ ಮಾಲೀಕರು ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಇತ್ತೀಚೆಗೆ ಮಣಿಪಾಲದಲ್ಲಿ ಖಾಸಗಿ ಶಾಲೆಯ ಬಸ್​ ಅಪಘಾತಕ್ಕೀಡಾಗಿದ್ದು, ಬಸ್​ನ ಕಂಡಕ್ಟರ್​ ಚಾಲನಾ ಪರವಾನಗಿ ಇಲ್ಲದೇ ವಾಹನ ಚಲಾಯಿಸಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಶಾಲಾ ವಾಹನಗಳ ಮೇಲೆ ವಿಶೇಷ ನಿಗಾ ವಹಿಸಿ, ವ್ಯಾಪಕ ತಪಾಸಣೆ ನಡೆಸುತ್ತಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net