ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಶೂನ್ಯವಾಗಲಿ: ನಾಗಲಕ್ಷ್ಮಿ

ರಾಜ್ಯ ಮಹಿಳಾ ಆಯೋಗದ ಅಧ್ಯೆ ಡಾ. ನಾಗಲಕ್ಷ್ಮಿ ಚೌಧರಿ ಉದ್ಘಾಟಿಸಿದರು.
ರಾಜ್ಯ ಮಹಿಳಾ ಆಯೋಗದ ಅಧ್ಯೆ ಡಾ. ನಾಗಲಕ್ಷ್ಮಿ ಚೌಧರಿ ಉದ್ಘಾಟಿಸಿದರು.
Published on
ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಉದ್ಯೋಗ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು.
ಸೋಮವಾರ ಮಣಿಪಾಲ ರಜತಾದ್ರಿಯ ಅಟಲ್​ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಆರಕ್ಷಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸ್ಥಳಿಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗೆ ಆಯೋಜಿಸಿದ್ದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಗೌರವಯುತ ವಾತಾವರಣ ನಿಮಾರ್ಣವಾಗಬೇಕು. ಮಹಿಳೆಯರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಭಯಮುಕ್ತ ವಾತಾವರಣದಲ್ಲಿ ಕೆಲಸ ನಿರ್ವಹಿಸಬೇಕು. ಇದರಿಂದ ಕುಟುಂಬ ಹಾಗೂ ಕೆಲಸ ಎರಡನ್ನೂ ಖುಷಿಯಿಂದ ನಿರ್ವಹಿಸಿಕೊಂಡು ಹೋಗಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳಿಗೆ ಆಸ್ಪದ ನೀಡಬಾರದು. ಯಾವುದೇ ಹೆಣ್ಣುಮಗಳು ತನ್ನ ಕೆಲಸದ ಸ್ಥಳದಲ್ಲಿ ದೌರ್ಜನ್ಯ ನಡೆದಾಗ ದೂರು ನೀಡಲು ಹಿಂಜರಿಯಬಾರದು ಎಂದರು.

ಪೋಶ್​ ಕಾಯಿದೆಯನ್ನು ಅನುಷ್ಠಾನ ಮಾಡುವಲ್ಲಿ ಎಲ್ಲಾ ಅಧಿಕಾರಿಗಳ ಪಾತ್ರ ಮಹತ್ವದಾಗಿದ್ದು, ಪ್ರತಿ ಇಲಾಖೆ ಮತ್ತು ಖಾಸಗಿ ಸಂಸ್ಥೆಗಳು ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸಿ, ದೂರುಗಳನ್ನು ಗೌಪ್ಯವಾಗಿ ಸ್ವೀಕರಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್​ ಬಾಯಲ್​ ಮಾತನಾಡಿ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ಜನರಲ್ಲಿ ಅರಿವು ಕಡಿಮೆ ಇದೆ. ಸಮಿತಿಗೆ ದೂರು ಬಂದಾಗ ಅದನ್ನು ಯಾವ ರೀತಿಯಲ್ಲಿ ಬಗೆಹರಿಸಬೇಕು ಎಂಬ ಅರಿವು ಸಮಿತಿಯ ಸದಸ್ಯರಿಗೆ ಇರಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ರಕ್ಷಣೆಯ ವಾತಾವರಣ ದೊರಕುವಂತಾಗಬೇಕು ಎಂದರು.

ಆಯಿಶಾ ಸಿಂಗ್​ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ್​, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್​ ಷಾ ಅಲ್ತಾಫ್​ ಅಹಮದ್​ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅನುರಾಧ ಬಿ. ಹಾದಿಮನೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ಮಹಿಳಾ ಅಭಿವೃದ್ಧಿ ನಿಗಮದ ನಿರೀಕ್ಷಕಿ ಸಂಗೀತ ಎಂ.ಕೆ ನಿರೂಪಿಸಿ, ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net