

ಉಡುಪಿ: ಕೆಲ ಸಂಘಟನೆಗಳ ಒತ್ತಡಕ್ಕೆ ಮಣಿದು ಡಿ.2ರಿಂದ ಆರಂಭವಾಗಲಿರುವ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಕುರಿತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ ನೀಡಿರುವ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷತ್ ಖಂಡಿಸುತ್ತದೆ. ಮತಾಂತರ ಹಾಗೂ ಗೋಹತ್ಯಾ ನಿಷೇಧ ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆಯುವ ಅಥವಾ ದುರ್ಬಲಗೊಳಿಸುವ ನಿರ್ಧಾರ ಕೈಗೊಂಡರೆ ರಾಜ್ಯಾದ್ಯಂತ ಪ್ರತಿಭಟನೆ ಹಾಗೂ ಜನಾಂದೋಲನ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಸುನೀಲ ಕೆ.ಆರ್. ಎಚ್ಚರಿಕೆ ನೀಡಿದರು.
ಉಡುಪಿಯ ಪತ್ರಿಕಾ ಭವನದಲ್ಲಿ ಸೋಮವಾರ (ನ.16) ಸುದ್ದಿಗೋಷ್ಠಿಯಲ್ಲಿ ಮಾತನಾಡಿ,
ನ.12ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕೆಲವು ಸಂಘಟನೆಗಳು ಈ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವುದು ಖಂಡನೀಯ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ 'ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020' ಹಾಗೂ 'ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2022'ನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಕೋಮು ಸಂಘರ್ಷಕ್ಕೆ ಕಾರಣ
ಬಲವಂತ, ವಂಚನೆ, ಆಮಿಷ ಅಥವಾ ದಾರಿ ತಪ್ಪಿಸಿ ನಡೆಸುವ ಕಾನೂನುಬಾಹಿರ ಮತಾಂತರ ತಡೆಯುವುದು ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆಯ ಉದ್ದೇಶವಾಗಿದೆ. ಇದು ಯಾವುದೇ ಧರ್ಮವನ್ನು ಗುರಿಯಾಗಿಸಿಕೊಂಡಿಲ್ಲ. ಗೋಹತ್ಯಾ ನಿಷೇಧ ಕಾಯ್ದೆಯು ರೈತರ ಹಿತಾಸಕ್ತಿ ಹಾಗೂ ಪಶುಸಂಪತ್ತಿನ ರಕ್ಷಣೆಗೆ ಅಗತ್ಯ. ಇವೆರಡು ಕಾಯ್ದೆಯನ್ನು ದುರ್ಬಲಗೊಳಿಸುವುದರಿಂದ ಗೋವುಗಳ ಅಕ್ರಮ ಸಾಗಾಟಕ್ಕೆ ಅವಕಾಶವಾಗಲಿದೆ. ಇದು ರಾಜ್ಯದಲ್ಲಿ ಅನಗತ್ಯ ಕೋಮು ಸಂಘರ್ಷಕ್ಕೂ ಕಾರಣವಾಗುತ್ತದೆ ಎಂದರು.
ಕೂಡಲೇ ಟೆಂಡರ್ ರದ್ದುಗೊಳಿಸಿ
ಅಲ್ಪಸಂಖ್ಯಾತರ ನಿರ್ದೇಶನಾಲಯವು 2026-27ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ 60 ದಿನಗಳ ಸೇನಾ ತರಬೇತಿ ನೀಡಲು ಟೆಂಡರ್ ಕರೆದಿದ್ದು ಅದನ್ನು ತಕ್ಷಣ ರದ್ದುಗೊಳಿಸಬೇಕು. ಜನರ ತೆರಿಗೆ ಹಣದಲ್ಲಿ ಧರ್ಮಾಧಾರಿತ ತರಬೇತಿ ನೀಡುವುದು ಸಂವಿಧಾನದ ಸಮಾನತೆಯ ಆಶಯಕ್ಕೆ ವಿರುದ್ಧವಾಗಿದೆ. ಆರ್ಥಿಕ ಹಿಂದುಳಿದಿರುವಿಕೆಯ ಮಾನದಂಡದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಎನ್ಸಿಸಿ ಹಾಗೂ ಶಿಕ್ಷಣ ಸಂಸ್ಥೆಗಳ ಮೂಲಕ ಸಮಾನ ತರಬೇತಿ ನೀಡಬೇಕು. ಈ ಮೂರು ವಿಚಾರಗಳ ಕುರಿತು ಜಿಲ್ಲಾಧಿಕಾರಿ, ತಹಸೀಲ್ದಾರ್ ಮೂಲಕ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಬಜರಂಗದಳ ಸಂಚಾಲಕ ಚೇತನ ಪೇರಲ್ಕೆ ಹಾಗೂ ವಿಶ್ವ ಹಿಂದೂ ಪರಿಷತ್ನ ಸಹ ಕಾರ್ಯದರ್ಶಿ ವಿಖ್ಯಾತ ಭಟ್ ಉಪಸ್ಥಿತರಿದ್ದರು.