ಪರಿಸರಸ್ನೇಹಿ ಪ್ರವಾಸೋದ್ಯಮಕ್ಕೆ ನೀಡಿ ಆದ್ಯತೆ

ಉಡುಪಿಯ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸ್ವರೂಪಾ ಟಿ.ಕೆ. ಮಾತನಾಡಿದರು. ವಿಂಧ್ಯಾ ಎನ್​.ಎಂ. ಹಾಗೂ ಜಿಲ್ಲೆಯ ಪ್ರವಾಸೋದ್ಯಮದ ಪಾಲುದಾರರು ಉಪಸ್ಥಿತರಿದ್ದರು.
ಉಡುಪಿಯ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸ್ವರೂಪಾ ಟಿ.ಕೆ. ಮಾತನಾಡಿದರು. ವಿಂಧ್ಯಾ ಎನ್​.ಎಂ. ಹಾಗೂ ಜಿಲ್ಲೆಯ ಪ್ರವಾಸೋದ್ಯಮದ ಪಾಲುದಾರರು ಉಪಸ್ಥಿತರಿದ್ದರು.
Published on

* ನೀಲಿನಕ್ಷೆ ಸಿದ್ಧಪಡಿಸಿಲು ಜಿಲ್ಲಾಧಿಕಾರಿ ಸ್ವರೂಪಾ ಸೂಚನೆ

* ಡಿಸಿ ಕಚೇರಿಯಲ್ಲಿ ಪಾಲುದಾರರೊಂದಿಗೆ ಸಭೆ

ಉಡುಪಿ: ಪ್ರಕೃತಿಯ ನೈಜ ಸೌಂದರ್ಯ ಹೊದಿರುವ ಉಡುಪಿ ಜಿಲ್ಲೆಯು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯಾಗಬೇಕಿದೆ. ಆ ನಿಟ್ಟಿನಲ್ಲಿ ಎಲ್ಲ ಸಕ್ರಿಯ ಪಾಲುದಾರರು ಶೀಘ್ರವಾಗಿ ಪರಿಸರಸ್ನೇಹಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಪೂರಕವಾದ ನೀಲಿನಕ್ಷೆ ಸಿದ್ಧಪಡಿಸಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ಕುರಿತಾಗಿ ಪ್ರವಾಸೋದ್ಯಮ ಪಾಲುದಾರರೊಂದಿಗೆ ಶನಿವಾರ (ಏ.4) ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.

ಮೂಲ ಸೌಕರ್ಯ ಕಲ್ಪಿಸಿ

ಜಿಲ್ಲೆಯ ಕಡಲ ಕಿನಾರೆಗಳು, ಪಶ್ಚಿಮ ಘಟ್ಟಗಳ ರಮಣೀಯ ಶ್ರೇಣಿಗಳು, ಕಾನನಗಳು, ಝರಿಗಳು ಹಾಗೂ ಧಾರ್ಮಿಕ ಕ್ಷೇತ್ರಗಳು ಪ್ರಮುಖ ಪ್ರವಾಸಿ ತಾಣವಾಗಿದೆ. ನಿತ್ಯವೂ ಸಾವಿರಾರು ಪ್ರವಾಸಿಗರು ಆಗಮಿಸಿ ಇಲ್ಲಿನ ಸೌಂದರ್ಯ ಕಣ್ತುಂಬಿಕೊಳ್ಳುತ್ತಿದ್ದಾರೆ. ಹೀಗಾಗಿ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮುನ್ನ ಪ್ರವಾಸಿ ತಾಣಗಳಲ್ಲಿ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್​, ವಸತಿ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು. ಆ ರೀತಿಯಲ್ಲಿಯೇ ಯೋಜನೆ ರೂಪಿಸಬೇಕು. ಕಳೆದ ಸಭೆಯಲ್ಲಿ ಸೂಚಿಸಿದಂತೆ ಪಾಲುದಾರರು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಸಮಗ್ರ ವರದಿಯನ್ನು ಏ.10ರಂದು ನೀಡಬೇಕು ಎಂದು ಡಿಸಿ ಸ್ವರೂಪಾ ತಿಳಿಸಿದರು.
ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚಚರ್ಚೆ ನಡೆಯಿತು. ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್​.ಎಂ. ಹಾಗೂ ಜಿಲ್ಲೆಯ ಪ್ರವಾಸೋದ್ಯಮದ ಪಾಲುದಾರರು ಉಪಸ್ಥಿತರಿದ್ದರು.

ಪ್ರವಾಸಿ ತಾಣಗಳ ಪ್ರಚಾರ ನಡೆಸಿ

ಉಡುಪಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಆದರೆ, ಜಿಲ್ಲೆಗೆ ಭೇಟಿ ನೀಡುವ ಶೇ.90 ಪ್ರವಾಸಿಗರಿಗೆ ಇಲ್ಲಿನ ಪ್ರವಾಸೋದ್ಯಮದ ಬಗ್ಗೆ ಮಾಹಿತಿ ಇಲ್ಲ. ಫೇಸ್​ಬುಕ್​, ಇನ್​ಸ್ಟಾಗ್ರಾಂ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳ ವಿವರ ಸುಲಭವಾಗಿ ದೊರಕುವಂತಾಗಬೇಕು. ಅಲ್ಲದೆ, ಜಿಲ್ಲೆಯ ಸಂಸ್ಕೃತಿ, ಪರಂಪರೆ, ಆಚಾರ-ವಿಚಾರ, ಜಿಲ್ಲೆಯ ವೈಶಿಷ್ಟ್ಯ, ಧಾರ್ಮಿಕತೆ, ಆಹಾರ ಶೈಲಿ, ವಸತಿ ವ್ಯವಸ್ಥೆಯ ಬಗ್ಗೆ ಸರಿಯಾದ ಮಾಹಿತಿ, ಪ್ರಚಾರ ದೊರೆತರೆ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಹಿರಿಮೆ ಹೆಚ್ಚಲಿದೆ. ಇದಕ್ಕೆ ಜಿಲ್ಲೆಯ ಪಾಲುದಾರರು ಹೆಚ್ಚಿನ ಆದ್ಯತೆ ನೀಡಬೇಕಿದೆ. ಹೊಸ ಪ್ರವಾಸಿ ಸ್ಥಳ ಅನ್ವೇಷಿಸಿ, ಪ್ರವಾಸಿಗರಿಗೆ ತೆರೆದಿಡುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕಿದೆ ಎಂದು ಡಿಸಿ ಸ್ವರೂಪಾ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net