

ಉಡುಪಿ: ಜಿಲ್ಲೆಯು ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದ್ದು, ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲೆಯ ಬಗ್ಗೆ ಸಮಗ್ರ ಮಾಹಿತಿ ನೀಡಲು ಪ್ರವಾಸೋದ್ಯಮ ಅನುಭವ ಕೇಂದ್ರ ಸ್ಥಾಪಿಸಲಾಗಿದೆ. ದೇಶ-&ವಿದೇಶದ ಪ್ರವಾಸಿಗರಿಗೆ ಇದರಿಂದ ಅನುಕೂಲವಾಗಲಿದೆ. ಜಿಲ್ಲೆಯು ಪ್ರವಾಸೋದ್ಯಮದಲ್ಲಿ ದೇಶಕ್ಕೆ ಮಾದರಿಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಮಂಗಳವಾರ ಬನ್ನಂಜೆ ಕೆಎಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿದ ಉಡುಪಿ ಪ್ರವಾಸೋದ್ಯಮ ಅನುಭವ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ಪ್ರವಾಸೋದ್ಯಮ ಅನುಭವ ಕೇಂದ್ರದಲ್ಲಿ ಜಿಲ್ಲೆಗೆ ಬರುವ ಎಲ್ಲಾ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಎಲ್ಲ ಮಾಹಿತಿಯು ಒಂದೇ ಕಡೆ ದೊರೆಯುವಂತೆ ತಂತ್ರಜ್ಞಾನ ಆಧಾರಿತ ವೆಬ್ ಸೈಟ್ ರೂಪಿಸಲಾಗಿದೆ. ಇದನ್ನು ಮೊಬೈಲ್ನಲ್ಲಿಯೂ ವೀಕ್ಷಿಸಬಹುದು. ಜೊತೆಗೆ ಕಾಫಿ ಟೇಬಲ್ ಪುಸ್ತಕವೂ ದೊರೆಯಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಆರ್ಥಿಕತೆಗೆ ಉತ್ತೇಜನ ನೀಡಲು ಪ್ರತ್ಯೇಕ ವಿಶೇಷ ಪ್ರವಾಸೋದ್ಯಮ ನೀತಿ ರೂಪಿಸಿದ್ದೇವೆ. ಇದರ ಭಾಗವಾಗಿ ಜಿಲ್ಲಾ ಪ್ರವಾಸೋದ್ಯಮ ಅನುಭವ ಕೇಂದ್ರ ಪ್ರಾರಂಭಿಸಲಾಗಿದೆ ಎಂದರು.
ಪ್ರವಾಸೋದ್ಯಮ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಅಭಿವೃದ್ದಿ ಹೊಂದಿದರೆ ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗ ಹೆಚ್ಚು ಜನರಿಗೆ ದೊರೆತರೆ ಕುಟುಂಬಗಳು ನೆಮ್ಮದಿಯ ಜೊತೆಗೆ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುತ್ತದೆ. ಇಲ್ಲಿನ ಯುವಜನರು ಉದ್ಯೋಗವನ್ನರಸಿ ಇತರೆ ಜಿಲ್ಲೆ, ರಾಜ್ಯ ಅಥವಾ ವಿದೇಶಗಳಿಗೆ ಹೋಗುವುದು ತಪ್ಪುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಮುಖಂಡರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು ಮತ್ತಿತರರು ಉಪಸ್ಥಿತರಿದ್ದರು.