ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ

workshop
ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ್​ ಉದ್ಘಾಟಿಸಿದರು.
Published on: 

ಉಡುಪಿ: ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ. ಮಕ್ಕಳ ಮೇಲಾಗುವ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಯಲು ಜಾರಿಗೊಳಿಸಲಾದ ಮಕ್ಕಳ ರಕ್ಷಣಾ ನೀತಿ-ನಿಯಮಗಳನ್ನು ಅನುಷ್ಠಾನಗೊಳಿಸಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ್​ ಕರೆ ನೀಡಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಮಕ್ಕಳ ರಕ್ಷಣಾ ನೀತಿ -2016 ಕುರಿತು ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಆಯೋಜಿಸಲಾದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಸೂಕ್ಷ$್ಮ ಸ್ವಭಾವದವರಾಗಿದ್ದು, ಅವರ ವಿಷಯದಲ್ಲಿ ಸಂವೇದನಾಶೀಲವಾಗಿ ವರ್ತಿಸಬೇಕು. ಮಕ್ಕಳ ರಕ್ಷಣೆಗಾಗಿ ಕಾಯಿದೆ, ಕಾನೂನುಗಳಿದ್ದರೂ ಸಹ ಬಾಲ್ಯ ವಿವಾಹ, ಶಾಲೆಯಿಂದ ಹೊರಗುಳಿದವರು, ದುಶ್ಚಟಗಳಿಗೆ ಬಲಿಯಾದ ಮಕ್ಕಳ ಪ್ರಕರಣಗಳು ನಮ್ಮ ಕಣ್ಣ ಮುಂದೆ ಇವೆ. ಇವುಗಳಿಗೆ ಕಡಿವಾಣ ಹಾಕಿ, ಮಕ್ಕಳು ಶಿಕ್ಷಣವಂತರಾಗಿ ಉತ್ತಮ ಬದುಕು ಕಟ್ಟಿಕೊಳ್ಳಲು ನಾಗರಿಕರು ಸಕ್ರೀಯವಾಗಿ ಕೆಲಸ ಮಾಡಬೇಕಿದೆ ಎಂದರು.

ಹದಿಹರೆಯದ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಪೋಷಕರೊಂದಿಗೆ ಕಾಲೇಜುಗಳಲ್ಲಿ ಅಧ್ಯಾಪಕರ ಪ್ರಮುಖ ಪಾತ್ರ ವಹಿಸಲಿದ್ದು, ಮಕ್ಕಳ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಈ ತರಬೇತಿಯು ಅತ್ಯಂತ ಮಹತ್ವದ್ದಾಗಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸತೀಶ್​ ಬಿ. ನಾಯಕ್​ ಮಾತನಾಡಿ, ಪೋಷಕರೊಂದಿಗೆ ಹೇಳಿಕೊಳ್ಳಲಾಗದ ಎಷ್ಟೊ ವಿಷಯಗಳನ್ನು ವಿದ್ಯಾರ್ಥಿಗಳು ಅಧ್ಯಾಪಕರ ಬಳಿ ಹಂಚಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆ ಮಾಡುವ ಹಕ್ಕುಗಳ ಮಾಹಿತಿ ಅರಿತಿರಬೇಕಾಗಿರುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಮಾತನಾಡಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟ ಪೂರ್ವ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್​ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಮಕ್ಕಳ ರಕ್ಷಣಾ ಘಟಕದ ಯೋಜನಾ ಸಂಯೋಜಕಿ ಜ್ಯೋತಿ ನಿರೂಪಿಸಿ, ವಂದಿಸಿದರು.