ಬರಾಯಕೆರೆ ಕಪ್ಪುಕಲ್ಲು ಗಣಿಗಾರಿಕೆಯಿಂದ ತೊಂದರೆ

 ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ನಡೆಯುತ್ತಿರುವ ಕಪ್ಪು ಕಲ್ಲಿನ ಗಣಿಗಾರಿಕೆ.
ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ನಡೆಯುತ್ತಿರುವ ಕಪ್ಪು ಕಲ್ಲಿನ ಗಣಿಗಾರಿಕೆ.
Published on

ಬೆಳ್ತಂಗಡಿ: ಅಳದಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆಯಲ್ಲಿ ನಡೆಯುತ್ತಿರುವ ಕಪ್ಪುಕಲ್ಲು ಗಣಿಗಾರಿಕೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಗುರುವಾರ ಬೆಳ್ತಂಗಡಿ ತಾಲೂಕು ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರಿಗೆ ಮನವಿ ಸಲ್ಲಿಸಿತು.

ಕಳೆದ 25 ವರ್ಷಗಳಿಂದ ಕೃಷಿ ಚಟುವಟಿಕೆ ಹೆಸರಿನಲ್ಲಿ ಸ್ಥಳೀಯ ಭೂಮಾಲೀಕರೊಬ್ಬರು ಗಣಿಗಾರಿಕೆ ನಡೆಸುತ್ತಿದ್ದಾರೆ. ಇದರಿಂದಾಗಿ ಪರಿಸರದ ಮನೆಗಳು ಬಿರುಕು ಬಿಟ್ಟಿವೆ. ಕಲ್ಲು, ಕಲ್ಲಿನ ಪುಡಿಯಿಂದ ಕೃಷಿಗೂ ತೊಂದರೆಯಾಗಿದೆ. ಬೃಹತ್ ಗಾತ್ರದ ಲಾರಿಗಳ ಸಂಚಾರದಿಂದ ಗ್ರಾಪಂ ರಸ್ತೆಗಳು, ಮೋರಿಗಳು ಹಾಳಾಗಿವೆ. ಐತಿಹಾಸಿಕ ಬರಾಯಕೆರೆ ಸಂಪೂರ್ಣ ಕಲುಷಿತಗೊಂಡಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ದೂರು ನೀಡಿದ್ದರೂ ಯಾವುದೇ ಇಲಾಖೆಗಳು ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.
ತಾಪಂ ಮಾಜಿ ಸದಸ್ಯ ಪ್ರಶಾಂತ್ ವೇಗಸ್, ಬರಾಯಕೆರೆ ಸಂರಕ್ಷಣಾ ಸಮಿತಿ ಮುಖಂಡರಾದ ಲಿಯೋ ಪಿರೇರಾ, ಹರೀಶ್ ಪೂಜಾರಿ, ಗಣೇಶ್ ದೇವಾಡಿಗ, ಮೆಲ್ವಿನ್ ಡಿಸೋಜ, ಪ್ರವೀಣ್ ನಿನ್ನಿಕಲ್ಲು, ಜೋನ್ ಡಿಸೋಜ, ದಿನೇಶ್ ಪೂಜಾರಿ, ಕೂಸ ಅಳದಂಗಡಿ, ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net