

ಉಡುಪಿ: ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಮೌಲ್ಯಾಧಾರಿತ ಶಿಕ್ಷಣ, ಸಮಾನ ಹಕ್ಕು ನೀಡಿ ಸಬಲರನ್ನಾಗಿ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಹೇಳಿದರು.
ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಪ್ರಸವಪೂರ್ವ ಲಿಂಗಪತ್ತೆ ಹಾಗೂ ಭ್ರೂಣ ಹತ್ಯೆ ನಿಷೇಧ ಕಾಯ್ದೆ ಹಾಗೂ ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಭಯಮುಕ್ತ ಸುರಕ್ಷಿತ ವಾತಾವರಣ ಕಲ್ಪಿಸಿ ಪುರುಷರಷ್ಟೆ ಸರಿ ಸಮಾನ ರೀತಿಯಲ್ಲಿ ಕಾಣಬೇಕು. ಹೆಣ್ಣು ಮಕ್ಕಳ ಪ್ರಾಮುಖ್ಯತೆಯ ಬಗ್ಗೆ ಪ್ರತಿಯೊಬ್ಬರೂ ಅರಿವು ಹೊಂದಿದಾಗ ಮಾತ್ರ ಲಿಂಗಾನುಪಾತದ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯ ಎಂದರು.
ಸರ್ಕಾರ ಯಾವುದೇ ಕಾಯಿದೆ, ಕಾನೂನು ಹಾಗೂ ಸುತ್ತೋಲೆಗಳನ್ನು ಅನುಷ್ಠಾನ ಮಾಡುವಾಗ ರೂಪುರೇಷೆ ಬಗ್ಗೆ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಸ್ಪಷ್ಟ ಮಾಹಿತಿ ಹೊಂದಿರಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಮಹಿಳೆಯರು ಹಾಗೂ ಪುರುಷರು ಸಮಾನರು ಎಂಬ ಮನೋಭಾವನೆ ಪ್ರತಿಯೊಬ್ಬರಲ್ಲೂ ಇದ್ದಾಗ ಮಾತ್ರ ಸಮಾಜದಲ್ಲಿ ಲಿಂಗ ತಾರತಮ್ಯ ಹೋಗಲಾಡಿಸಬಹುದು. ಹೆಣ್ಣು ಮಕ್ಕಳನ್ನು ಭ್ರೂಣಾವಸ್ಥೆಯಿಂದಲೇ ರಕ್ಷಿಸುವ ಕೆಲಸವಾಗಬೇಕು. ಆಗ ಮಾತ್ರ ಲಿಂಗಾನುಪಾತದಲ್ಲಿ ಸುಧಾರಣೆ ತರಲು ಸಾಧ್ಯ ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದ ಇತರೆ ಜಿಲ್ಲೆಗೆ ಹೋಲಿಸಿದ್ದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯು ಮಾತೃಪ್ರಧಾನ ಕುಟುಂಬ ವ್ಯವಸ್ಥೆ ಹೊಂದಿರುವುದರಿಂದ ಲಿಂಗ ತಾರತಮ್ಯದಂತಹ ಪ್ರಕರಣಗಳು ಹೆಚ್ಚು ಕಂಡುಬರುತ್ತಿಲ್ಲ. ಕೆಲಸದ ಸ್ಥಳಗಳಲ್ಲಿ, ಕೌಟುಂಬಿಕ ವಾತಾವರಣದಲ್ಲಿ ಮಹಿಳೆಯರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ತಮಗೆ ಅರಿವಿಲ್ಲದಂತೆ ಲಿಂಗ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಸರ್ಕಾರಿ, ಖಾಸಗಿ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು ಲೈಂಗಿಕ ದೌಜ್ಯನ್ಯದಂತಹ ಪ್ರಕರಣಗಳನ್ನು ಎದುರಿಸಿದಾಗ ಆಂತರಿಕ ದೂರು ಸಮಿತಿಯಲ್ಲಿ ದೂರುಗಳನ್ನು ದಾಖಲಿಸಬಹುದಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಎನ್‌ಫೋರ್ಸ್ಮೆಂಟ್ ಆಫೀಸರ್ ಡಾ. ರಾಮ್‌ರಾವ್ ಕೆ., ವಕೀಲ ರಾಜೇಶ್ ಪಿ., ಪ್ರಾಧ್ಯಾಪಕಿ ಡಾ. ನಿಕೇತನ , ಮಂಗಳೂರು ಸೈಂಟ್ ಅಲೋಶಿಯಸ್ ಕಾನೂನು ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ರಾಯನ್ ಫರ್ನಾಂಡೀಸ್ ಮಾಹಿತಿ ನೀಡಿದರು.
ಜಿಪಮ್ ಉಪಕಾರ್ಯದರ್ಶಿ ಶ್ಯಾಮ್ ಎಸ್. ಕಾದ್ರೋಳ್ಳಿ, ಉಡುಪಿ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಬಿ. ಹಾದಿಮನೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ದೀಪಾ ನಿರೂಪಿಸಿ, ಶಾರದಾ ವಂದಿಸಿದರು.