

ವಿಜಯವಾಣಿ ಸುದ್ದಿಜಾಲ ಉಡುಪಿ
ಮಹರ್ಷಿ ವಾಲ್ಮೀಕಿ ಜಯಂತಿಯ ನಿಮಿತ್ತ ಎರಡು ವರ್ಷದಿಂದ ಉಡುಪಿ ಜಿಲ್ಲಾ ಮಹರ್ಷಿ ವಾಲ್ಮೀಕಿ ಸಂಘದಿಂದ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿಯ ಪ್ರಶಸ್ತಿಗೆ ಖ್ಯಾತ ಛಾಯಾಗ್ರಾಹಕ ಹಾಗೂ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಜನಾರ್ದನ ಕೊಡವೂರು ಆಯ್ಕೆಯಾಗಿದ್ದಾರೆ ಎಂದು ಸಂಘಟನೆಯ ಗೌರವಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಮಾಹಿತಿ ನೀಡಿದರು.
ಉಡುಪಿಯ ಪತ್ರಿಕಾಭವನದಲ್ಲಿ ಗುರುವಾರ (ಅ.2) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅ.7ರಂದು ಸಂಜೆ 4:30ಕ್ಕೆ ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆಯುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿಯ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಹರಿಶ್ಚಂದ್ರ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ ಎಚ್.ಪಿ. ಪಾಲ್ಗೊಳ್ಳಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಅಧ್ಯಕ್ಷ ಗೋಪಾಲ ದೇವದುರ್ಗ, ಕಾರ್ಯದರ್ಶಿ ಈರಪ್ಪ ಗೌಂಡಿ ಉಪಸ್ಥಿತರಿದ್ದರು.