ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ...

Jayakrishna
Published on

ಸರ್ಕಾರಕ್ಕೆ ಜಯ ಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

ವಿಜಯವಾಣಿ ಸುದ್ದಿಜಾಲ ಉಡುಪಿ

ಧರ್ಮಸ್ಥಳ ಕ್ಷೇತ್ರ ಹಾಗೂ ಅಲ್ಲಿನ ಧಮಾರ್ಧಿಕಾರಿಯ ಕುರಿತಾಗಿ ಅಪಪ್ರಚಾರ ನಡೆಯುತ್ತಿರುವುದು ಖಂಡನೀಯ. ಅಂತಹವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಯ ಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸರ್ಕಾರಕ್ಕೆ ಆಗ್ರಹಿಸಿದೆ.

ಸಾವಿರಾರು ವರ್ಷಗಳ ಐತಿಹ್ಯ ಹೊಂದಿರುವ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಕ್ಷೇತ್ರವು ಬಹು ಧಮೀರ್ಯರ ಸಾಂಸ್ಕೃತಿಕ ಕೇಂದ್ರವಾಗಿದ್ದು, ಹಿಂದುಗಳು ಶ್ರೀಕ್ಷೇತ್ರದ ಬಗ್ಗೆ ಅಪಾರ ಭಕ್ತಿ-ಭಾವ ಹೊಂದಿದ್ದಾರೆ. ಅಪಪ್ರಚಾರ ಮಾಡುತ್ತಿರುವುದು ಸನಾತನ ಧರ್ಮಕ್ಕೆ, ಹಿಂದು ಸಂಸ್ಕೃತಿಗೆ ಹಾಗೂ ಧಾರ್ಮಿಕ ಸಹಿಷ್ಣುತೆಗೆ ಅಪಾಯಕಾರಿಯಾಗಿದೆ ಎಂದು ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಪ್ರಕಟಣೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಧರ್ಮಾಧಿಕಾರಿ ರಾಜಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಗ್ರಾಮಾಭಿವೃದ್ಧಿ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜಮುಖಿ ಯೋಜನೆಗಳಿಂದಲೇ ಹೆಸರುವಾಸಿಯಾಗಿದ್ದು, ಪದ್ಮವಿಭೂಷಣ ಪುರಸ್ಕೃತರೂ ಆಗಿದ್ದಾರೆ. ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುವ ಪವಿತ್ರ ಸ್ಥಳದ ಅಪಪ್ರಚಾರ ಮತ್ತೆ ಮುಂದುವರಿಯಲು ಸರ್ಕಾರ ಅವಕಾಶ ನೀಡಬಾರದು ಎಂದು ತಿಳಿಸಿದ್ದಾರೆ.

ಪ್ರಜ್ಞಾವಂತ ನಾಗರಿಕರು ಧರ್ಮಸ್ಥಳ ಕ್ಷೇತ್ರದ ಕುರಿತಾಗಿ ಬರುತ್ತಿರುವ ತಪ್ಪು ಮಾಹಿತಿಗಳಿಗೆ ಕಿವಿಗೊಡದೆ ನಮ್ಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ರಕ್ಷಣೆಗೆ ನಿಲ್ಲಬೇಕು. ಆ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸತ್ಯದ ಬೆಳಕು ಪಸರಿಸುವಂತೆ ಮಾಡಬೇಕು ಎಂದು ಜಯಕೃಷ್ಣ ಶೆಟ್ಟಿ ವಿನಂತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net