ದೇಶದಲ್ಲಿ ವರ್ಷಕ್ಕೆ 10 ಲಕ್ಷ ಯುವಜನರಿಗೆ ಉದ್ಯೋಗ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

udyoga mela
Published on

ಮೈಸೂರು: ಕೇಂದ್ರ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ದೇಶದಲ್ಲಿ 10 ಲಕ್ಷ ಯುವಜನರಿಗೆ ಉದ್ಯೋಗ ನೀಡುವ ಗುರಿ ಹೊಂದಿದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ನಗರದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್) ಸಭಾಂಗಣದಲ್ಲಿ ಮಂಗಳವಾರ ಕೆನರಾ ಬ್ಯಾಂಕ್ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿ, ಕೇವಲ ಉದ್ಯೋಗ ನೀಡುವುದು ಮಾತ್ರವಲ್ಲದೆ ನವೋದ್ಯಮಗಳಿಗೆ ಹೆಚ್ಚಿನ ಉತ್ತೇಜನ ನೀಡಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಲಾಗುತ್ತಿದೆ. ದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನವೋದ್ಯಮಗಳು ಪ್ರಾರಂಭವಾಗಿವೆ. ಅಲ್ಲದೆ, ಹಲವಾರು ಜನರಿಗೆ ಕೌಶಲ್ಯ ತರಬೇತಿ ಹಾಗೂ ಹಣಕಾಸಿನ ನೆರವು ನೀಡಿ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದರು.

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ, ಬ್ಯಾಂಕ್‌ಗಳಲ್ಲಿ ಹಾಗೂ ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇತ್ತು. ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಈ ಹಿಂದೆ ಯಾರು ಆಸಕ್ತಿ ತೋರಲಿಲ್ಲ. ಆದರೆ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ಯುವಜನರಿಗೆ ಉದ್ಯೋಗ ನೀಡಲು ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಇಂದು ದೇಶಾದ್ಯಂತ 71 ಸಾವಿರ ಯುವಕ ಯುವತಿಯರಿಗೆ ಉದ್ಯೋಗ ನೀಡುತ್ತಿದ್ದೇವೆ. ಇದು 6ನೇ ಉದ್ಯೋಗ ಮೇಳವಾಗಿದ್ದು, ಇದುವರೆಗೆ 3.59 ಲಕ್ಷ ಉದ್ಯೋಗ ನೀಡಲಾಗಿದೆ ಎಂದು ಹೇಳಿದರು.

ಈ ಸಂದರ್ಭ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಸಾಂಕೇತಿಕವಾಗಿ 25 ಅಭ್ಯರ್ಥಿಗಳಿಗೆ ಉದ್ಯೋಗ ನೇಮಕಾತಿ ಪತ್ರ ನೀಡಿದರು. ವೇದಿಕೆಯಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ, ಮೇಯರ್ ಶಿವಕುಮಾರ್, ಆಯಿಷ್ ನಿರ್ದೇಶಕಿ ಡಾ. ಎಂ. ಪುಷ್ಪಾವತಿ, ನೈಋತ್ಯ ರೈಲ್ವೆ ಮೈಸೂರು ವಿಭಾಗೀಯ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್, ಕೇಂದ್ರ ಹಣಕಾಸು ಸೇವಾ ಇಲಾಖೆಯ ನಿರ್ದೇಶಕಿ ಸಂಜಯ್ ಕುಮಾರ್, ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ದೇಬಶೀಶ್ ಮುಖರ್ಜಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net