

ಮಂಡ್ಯ: ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠರು ಬರುವುದಿಲ್ಲ ಎಂದಿದ್ದಾರೆ. ಈ ಮೂಲಕ ಸನಾತನ ಧರ್ಮ ವಿರೋಧ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ನಿರ್ಮೂಲನೆ ಆಗಲಿದೆ ಎಂದು ಕೇಂದ್ರ ಇಂಧನ ಮತ್ತು ಬೃಹತ್ ಕೈಗಾರಿಕಾ ಸಚಿವ ಕ್ರಿಶನ್ ಪಾಲ್ ಗುರ್ಜರ್ ಹೇಳಿದರು.
ನಗರದಲ್ಲಿ ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ವಿತರಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ. ಸನಾತನ ಧರ್ಮವನ್ನು ವಿರೋಧ ಮಾಡುವ ಮೂಲಕ ಕಾಂಗ್ರೆಸ್ ತನ್ನಿಂದ ತಾನೇ ಪಥನವಾಗುತ್ತಿದೆ. ಅವರ ವಿನಾಶವನ್ನು ಅವರೇ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮವಲ್ಲ. ಸಾಧು-ಸಂತರ ಕಾರ್ಯಕ್ರಮ. ಕಾರ್ಯಕ್ರಮಕ್ಕೆ ಬಿಜೆಪಿ ಆಹ್ವಾನಿಸಿಲ್ಲ ಎಂದು ಕಾಂಗ್ರೆಸ್ ಪಕ್ಷದ ವರಿಷ್ಠರು ಹಾಗೂ ನಾಯಕರು ಗೈರಾಗುವುದಾಗಿ ತಿಳಿಸಿದ್ದಾರೆ. ಇದು ನಮ್ಮ ಮನೆಯ ಕಾರ್ಯಕ್ರಮವಲ್ಲ, ಇಡೀ ದೇಶದ ಹಿಂದುಗಳ ಕಾರ್ಯಕ್ರಮವಾಗಿದೆ. ಆದ್ದರಿಂದ ಕಾಂಗ್ರೆಸ್ ನಾಯಕರನ್ನು ಬಿಜೆಪಿ ನಾಯಕರು ಆಹ್ವಾನಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ರಾಮರಾಜ್ಯ, ರಾಮನ ಕನಸು ನನಸು ಆಗಬೇಕಿದೆ. ಆದರೆ, ಕೋಟ್ಯಂತರ ಹಿಂದುಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಸೋನಿಯಾ ಗಾಂಧಿ, ರಾಹುಲ್‌ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಇಂತಹವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಮುಂದೆ ಅವರೇ ಪಶ್ಚಾತಾಪ ಪಡುತ್ತಾರೆ ಎಂದು ಎಚ್ಚರಿಕೆ ನೀಡಿದ ಅವರು, ಹಿಂದುಗಳನ್ನು ನಿರ್ಲಕ್ಷಿೃಸಿ ಒಂದು ಜನಾಂಗದ ಪರ ನಿಂತಿದ್ದರಿಂದಲೇ ಇತ್ತೀಚೆಗೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಯುವಂತಾಗಿದೆ ಎಂದು ಛೇಡಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್, ರಾಜ್ಯಕಾರ್ಯಕಾರಣಿ ಸದಸ್ಯ ಡಾ.ಸಿದ್ದರಾಮಯ್ಯ, ನಗರಸಭೆ ಸದಸ್ಯ ಅರುಣ್‌ಕುಮಾರ್, ಪ.ನಾ.ಸುರೇಶ್, ಸಿ.ಟಿ.ಮಂಜುನಾಥ್ ಇದ್ದರು.
ಇದೇ ವೇಳೆ ಕಾಂಗ್ರೆಸ್ ಮಾಜಿ ಸಚಿವ ಎಂ.ಎಸ್.ಆತ್ಮಾನಂದ ನಿವಾಸಕ್ಕೆ ತೆರಳಿದ ಬಿಜೆಪಿ ನಾಯಕರು ಮಂತ್ರಾಕ್ಷತೆ ಹಾಗೂ ಅಯೋಧ್ಯೆ ಫೋಟೋ ನೀಡಿದರು. ಅದನ್ನು ಸ್ವೀಕರಿಸಿದ ಆತ್ಮಾನಂದ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.