ಡಿ.24ರಂದು ಉಡುಪಿಗೆ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್

udp-20-Anurag Thakur ji
Published on

ಉಡುಪಿ: ಬಿಜೆಪಿ ಉಡುಪಿ ನಗರ ಹಾಗೂ ಗ್ರಾಮಾಂತರ ಸಮಿತಿ ವತಿಯಿಂದ ಡಿ. 24ರಂದು ಎಂಜಿಎಂ ಮೈದಾನದಲ್ಲಿ ನಡೆಯುವ ಅಟಲ್ ಉತ್ಸವ ಹಾಗೂ ಹೊನಲು ಬೆಳಕಿನ ರಾಷ್ಟ್ರ ಮಟ್ಟದ ಅಟಲ್ ಟ್ರೋಫಿ ಪ್ರೊ. ಕಬಡ್ಡಿ ಪಂದ್ಯಕೂಟವನ್ನು ಕೇಂದ್ರ ಯುವಜನ ಸೇವೆ, ಕ್ರೀಡೆ ಹಾಗೂ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಉದ್ಘಾಟಿಸಲಿದ್ದಾರೆ ಎಂದು ಶಾಸಕ ಕೆ. ರಘುಪತಿ ಭಟ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

24ರಂದು ಸಾಯಂಕಾಲ 7 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣ ಗೌಡ ಪಂದ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಒಳನಾಡು ಸಾರಿಗೆ, ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ, ಕನ್ನಡ ಮತ್ತು ಸಂಸ್ಕೃತಿ ಹಾಗು ಇಂಧನ ಸಚಿವ ವಿ.ಸುನಿಲ್ ಕುಮಾರ್, ಸಮಾಜ ಕಲ್ಯಾಣ ಕೋಟ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಾದ ದೆಹಲಿ, ಹರಿಯಾಣ, ತಮಿಳುನಾಡು, ಮಹಾರಾಷ್ಟ್ರ, ಕೇರಳ ರಾಜ್ಯಗಳ ಒಟ್ಟು 12 ತಂಡಗಳು ಪಂದ್ಯಕೂಟದಲ್ಲಿ ಭಾಗವಹಿಸಲಿದ್ದು, ವಿಜೇತರಿಗೆ ಪ್ರಥಮ ಬಹುಮಾನ 1 ಲಕ್ಷ ರೂಪಾಯಿ, ದ್ವಿತೀಯ 75 ಸಾವಿರ ರೂ., ತೃತೀಯ 50 ಸಾವಿರ ರೂ., ಚತುರ್ಥ 25 ಸಾವಿರ ರೂ. ನಿಗದಿ ಮಾಡಲಾಗಿದೆ. ಸುಮಾರು 10 ರಿಂದ 15 ಸಾವಿರ ವೀಕ್ಷಕರು ವೀಕ್ಷಿಸಲು ಗ್ಯಾಲರಿ ಮತ್ತು ಆಸನಗಳ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

25ರಂದು ಬೂತ್ ಸಂಗಮ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಸುಶಾಸನ ದಿವಸ್ ಆಚರಿಸಲಾಗುತ್ತಿದ್ದು, ಡಿ.25ರಂದು ಸಾಯಂಕಾಲ 4 ಗಂಟೆಗೆ ಉಡುಪಿ ವಿಧಾನಸಭಾ ಕ್ಷೇತ್ರದ 226 ಮತಗಟ್ಟೆಗಳ ಅಧ್ಯಕ್ಷರ ಸಮಾವೇಶ ಬೂತ್ ಸಂಗಮ ಕಾರ್ಯಕ್ರಮ ಅಯೋಜಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ದಿಕ್ಸೂಚಿ ಭಾಷಣ ಮಾಡಲಿದ್ದು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಸಂಘಟನಾತ್ಮಕ ಮಾರ್ಗದರ್ಶನ ನೀಡಲಿದ್ದಾರೆ. ಉಡುಪಿ ನಗರ ಬಿಜೆಪಿ ಪ್ರಕಟಿಸುತ್ತಿರುವ ಸಮಗ್ರ ಕೃಷಿ ಮಾಹಿತಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ರೈತ ಪರ ಯೋಜನೆಗಳ ಕೈಪಿಡಿ ಅನ್ನದಾತ ಸುಖೀಭವಃ ವಿಶೇಷ ಸಂಚಿಕೆಯನ್ನು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಬಿಡುಗಡೆ ಗೊಳಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಚಲನಚಿತ್ರ ಗಾಯಕ ವಿಜಯಪ್ರಕಾಶ್ ನೇತೃತ್ವದ ತಂಡದಿಂದ ಸಂಗೀತೋತ್ಸವ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಗಾಯಕಿಯರಾದ ಅನುರಾಧ ಮತ್ತು ಐಶ್ವರ್ಯ ಭಾಗವಹಿಸಲಿದ್ದಾರೆ ಎಂದರು.

ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ರಾಷ್ಟ್ರೀಯ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ ಕಲ್ಮಾಡಿ, ಮಾಜಿ ಆಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಜಿಪಂ ಮಾಜಿ ಅಧ್ಯಕ್ಷ ದಿನಕರ ಬಾಬು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net