

ವಿಜಯವಾಣಿ ಸುದ್ದಿಜಾಲ ಉಡುಪಿ
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ನಮಿತ್ತ ನ.11ರಂದು ಏಕತಾ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಶಿಸ್ತುಬದ್ಧವಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾಡಳಿತಕ್ಕೆ ಉಡುಪಿ- ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ (ನ.3) ಆಯೋಜಿಸಿದ್ದ ಏಕತಾ ನಡಿಗೆ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸಭೆಯಲ್ಲಿ ಕಾರ್ಯಕ್ರಮದ ರೂಪು-ರೇಷೆ ಕುರಿತು ಚರ್ಚೆ ನಡೆಯಿತು. ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಡಿಎಚ್ಒ ಡಾ. ಬಸವರಾಜ ಹುಬ್ಬಳ್ಳಿ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕ ಉಲ್ಲಾಸ್ ಹಾಗೂ ಇತರರು ಉಪಸ್ಥಿತರಿದ್ದರು.
ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ನ.11ರಂದು ಬೆಳಗ್ಗೆ 7:30ಕ್ಕೆ ಏಕತಾ ನಡಿಗೆ ಜಾಥಾಕ್ಕೆ ಚಾಲನೆ ನೀಡಲಾಗುವುದು. ಅಜ್ಜರಕಾಡು ಭುಜಂಗ ಪಾರ್ಕ್ನ ಹುತಾತ್ಮರ ಯುದ್ಧ ಸ್ಮಾರಕದವರೆಗೆ ಮೆರವಣಿಗೆ ನಡೆಯಲಿದೆ. ಅಲ್ಲಿರುವ ಗಾಂಧಿಕಟ್ಟೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ, ಸಾಧನೆ ಕುರಿತು ಜನರಿಗೆ ಮನನ ಮಾಡಿಸಲು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಆಯೋಜಿಸಬೇಕು. | ಕೋಟ ಶ್ರೀನಿವಾಸ ಪೂಜಾರಿ. ಉಡುಪಿ ಸಂಸದ