

ಹುಬ್ಬಳ್ಳಿ : ಕೇಂದ್ರ ಶಿಕ್ಷಣ ಮಂತ್ರಾಲಯ ವತಿಯಿಂದ 2024-25ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯ ಮೂರು ಪ್ರೌಢ ಶಾಲೆಗಳನ್ನು ಹಿರಿಯ ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಧಾರವಾಡ ತಾಲೂಕಿನ ವೀರಾಪೂರ ಸರ್ಕಾರಿ ಪ್ರೌಢಶಾಲೆ, ಹುಬ್ಬಳ್ಳಿ ತಾಲೂಕಿನ ಕೋಳಿವಾಡ ಸರ್ಕಾರಿ ಪ್ರೌಢಶಾಲೆ ಮತ್ತು ಕಲಘಟಗಿ ತಾಲೂಕಿನ ದೇವಿಕೊಪ್ಪ ಸರ್ಕಾರಿ ಪ್ರೌಢಶಾಲೆಗಳನ್ನು ಹಿರಿಯ ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲಾಗಿದೆ. ಈ ಕುರಿತು ಈಗಾಗಲೇ ಆಯಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈಗಿರುವ ಪ್ರೌಢಶಾಲೆಗಳಲ್ಲಿ ಮೂಲ ಸೌಕರ್ಯಗಳೂ ಸೇರಿದಂತೆ ವಿಜ್ಞಾನ ಪ್ರಯೋಗಾಲಯಗಳನ್ನು ಉನ್ನತೀಕರಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.