

ಮಂಡ್ಯ: ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಸೇವಿಸಲು ಬರುವ ಬಹಳಷ್ಟು ಜನರು ಬಡ ವರ್ಗದವರಾಗಿದ್ದು, ಅವರಿಗೆ ಶುಚಿ ಹಾಗೂ ರುಚಿಯಾದ ಆಹಾರ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್‌ನಲ್ಲಿ ನೀಡುವ ಆಹಾರದ ಗುಣಮಟ್ಟ ಹಾಗೂ ಶುದ್ಧ ಕುಡಿಯುವ ನೀರನ್ನು ಅಧಿಕಾರಿಗಳು ನಿಗದಿತವಾಗಿ ಪರಿಶೀಲಿಸಬೇಕು. ಜಿಲ್ಲೆಯ ಇಂದಿರಾ ಕ್ಯಾಂಟೀನ್‌ಗಳಲ್ಲಿ ನೀಡಲಾಗುವ ಆಹಾರ ಗುಣಮಟ್ಟ ಹಾಗೂ ಪ್ರಮಾಣ ಕಡಿಮೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಆದ್ದರಿಂದ ಅಧಿಕಾರಿಗಳು ಹಾಗಾಗ ಭೇಟಿ ನೀಡಿ ಪರಿಶೀಲನೆ ನಡೆಸಿ ಎಂದು ತಿಳಿಸಿದರು.
ಅಮೃತ 2.0 ಯೋಜನೆಯಡಿ 23.22 ಕೋಟಿ ರೂ ಅನುದಾನದಲ್ಲಿ ಪಾಂಡವಪುರ ಪಟ್ಟಣದಲ್ಲಿ, 36.61 ಕೋಟಿ ರೂ ಅನುದಾನದಲ್ಲಿ ಕೆ.ಆರ್.ಪೇಟೆ ಪಟ್ಟಣದಲ್ಲಿ, 36.07 ಕೋಟಿ ರೂ ವೆಚ್ಚದಲ್ಲಿ ನಾಗಮಂಗಲ ಪಟ್ಟಣದಲ್ಲಿ, 31.06 ಕೋಟಿ ರೂ ವೆಚ್ಚದಲ್ಲಿ ಬೆಳ್ಳೂರಿನಲ್ಲಿ ಹಾಗೂ 23.44 ಕೋಟಿ ರೂ ವೆಚ್ಚದಲ್ಲಿ ಶ್ರೀರಂಗಪಟ್ಟಣದಲ್ಲಿ ಕುಡಿಯುವ ನೀರು ಒದಗಿಸಲು ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಗುಣಮಟ್ಟದ ಕಾಮಗಾರಿಯನ್ನು ಕೈಗೊಂಡು ಶೀಘ್ರವಾಗಿ ಪೂರ್ಣಗೊಳಿಸಿ ಎಂದರು.
ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳು ಎಲ್ಲೆಂದರಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ವ್ಯಾಪಾರ ಮಾಡಲು ಪರ್ಯಾಯ ಸ್ಥಳ ಗುರುತಿಸಿ. ಅಂತೆಯೇ ಸರ್ಕಾರ ಅವರಿಗಾಗಿ ರೂಪಿಸಿರುವ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿ. ನಗರ ಸ್ಥಳೀಯ ಸಂಸ್ಥೆಗಳು ವ್ಯಾಪಾರಸ್ಥರಿಗೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಿಳಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಶೀಘ್ರದಲ್ಲೇ ಪೂರ್ಣ ಗಳಿಸಿ ಹಾಗೂ ಬಾಕಿ ಇರುವ ನೀರಿನ ತೆರಿಗೆ ಶುಲ್ಕವನ್ನು ವಸೂಲಾತಿ ಮಾಡಿ. ಕುಡಿಯುವ ನೀರಿನ ಗುಣಮಟ್ಟವನ್ನು ನಿಗದಿತ ಅವಧಿಯೊಳಗೆ ಪರಿಶೀಲನೆ ನಡೆಸುವುದರ ಜತೆಗೆ ಕಳೆದ ನಾಲ್ಕು ತಿಂಗಳು ನೀರಿನ ಗುಣಮಟ್ಟವನ್ನು ತಾಳೆ ಮಾಡಿ ನೋಡಿ. ಕುಡಿಯುವ ನೀರಿನ ಗುಣಮಟ್ಟವನ್ನು ಹೆಚ್ಚಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ಟಿ.ಎನ್.ನರಸಿಂಹಮೂರ್ತಿ, ಕಾರ್ಯನಿರ್ವಾಹಕ ಇಂಜಿನಿಯರ್ ಪ್ರತಾಪ್, ನಗರಸಭೆ ಪೌರಾಯುಕ್ತೆ ಪಂಪಶ್ರೀ ಇತರರಿದ್ದರು.