

ಬಾದಾಮಿ: ಸಾರ್ವಜನಿಕರಿಂದ ಬಂದ ಅಹವಾಲುಗಳಿಗೆ ತುರ್ತು ವಿಲೇವಾರಿಗೆ ಕ್ರಮಕೈಗೊಳ್ಳುವಂತೆ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ನಗರದ ತಾ.ಪಂ. ಸಭಾ ಭವನದಲ್ಲಿ ಹಮ್ಮಿಕೊಂಡ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿ, ಜನತೆ ಹೊತ್ತು ತಂದ ಕುಂದು-ಕೊರತೆ ಹಾಗೂ ಅಹವಾಲುಗಳಿಗೆ ಸ್ಪಂದಿಸುವ ಕೆಲಸವಾಗಬೇಕು. ಸಾಧ್ಯವಾದಷ್ಟು ಬೇಗನೇ ಇತ್ಯರ್ಥಗೊಳಿಸಿ, ಅಧಿಕಾರಿ ಹಾಗೂ ಇಲಾಖೆ ಮೇಲೆ ವಿಶ್ವಾಸ ಮೂಡಿಸುವ ಕಾರ್ಯವಾಗಬೇಕು. ಈಗಾಗಲೇ ಮೊದಲ ಹಂತದಲ್ಲಿ ಜನಸ್ಪಂದನ ಕಾರ್ಯಕ್ರಮ ಯಶಸ್ವಿಯಾಗಿದ್ದು, ಈಗಲೂ ಸಹ ಸಮಸ್ಯೆಗೆ ಸ್ಪಂದಿಸಬೇಕು ಎಂದರು.
ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಮಾತನಾಡಿ, ತಾಲೂಕು ಹಂತದಲ್ಲಿ ಬಂದ ಅರ್ಜಿಗಳನ್ನು ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ನಿಯಂತ್ರಣ ಮಾಡಲಾಗುತ್ತಿದ್ದು, ಅರ್ಜಿಗಳಿಗೆ ತುರ್ತಾಗಿ ಇತ್ಯರ್ಥಗೊಳಿಸಲು ಹೇಳಿದರು.
ನಂತರ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರದಲ್ಲಿ ಒಟ್ಟು 137 ಅರ್ಜಿಗಳು ಸ್ವೀಕತಗೊಂಡಿದ್ದು, ಅದರಲ್ಲಿ ಮುಖ್ಯವಾಗಿ ಕಂದಾಯ, ಶಿಕ್ಷಣ, ಕೆಇಬಿ, ಗ್ರಾ.ಪಂ. ಕುಡಿಯುವ ನೀರಿನ ಸಮಸ್ಯೆ, ವಸತಿ, ಶಾಲಾ ಕಟ್ಟಡ, ಹೆಸ್ಕಾಂ, ಸಹಕಾರ, ಗ್ರಾ.ಪಂ, ಶಿಕ್ಷಣ ಇಲಾಖೆ, ಸಣ್ಣ ನೀರಾವರಿ, ಲೋಕೋಪಯೋಗಿ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ 137 ಅರ್ಜಿಗಳು ಸ್ವೀಕತಗೊಂಡವು.
ಬಾಗಲಕೋಟೆ ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ಬಾದಾಮಿ ತಹಸೀಲ್ದಾರ ಜೆ.ಬಿ. ಮಜ್ಜಗಿ, ಗುಳೇದಗುಡ್ಡ ತಹಸೀಲ್ದಾರ ಮಂಗಳಾ ಎಂ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಬಡಿಗೇರ, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.