ಪರಿಶಿಷ್ಟರಿಗೆ ಮೀಸಲಿಟ್ಟ ಅನುದಾನ ಕಾಲಮಿತಿಯಲ್ಲಿ ಬಳಸಿ: ವೆಂಕಟ್ ರಾಜಾ

MDK11
Published on

ಮಡಿಕೇರಿ: ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಸಾರ್ವಜನಿಕ ಶಿಕ್ಷಣ, ಲೋಕೋಪಯೋಗಿ ಹೀಗೆ ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಅನುದಾನವನ್ನು ಕಾಲಮಿತಿಯಲ್ಲಿ ನಿಯಮಾನುಸಾರ ಬಳಸುವಂತೆ ಜಿಲ್ಲಾಧಿಕಾರಿ ವೆಂಕಟ ರಾಜಾ ಸೂಚಿಸಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಕಾರ್ಯಕ್ರಮ ಅನುಷ್ಠಾನ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.


ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.


ಪ್ರತೀ ಇಲಾಖೆಗೂ ಸಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಕಾರ್ಯಕ್ರಮಗಳು/ ಸೌಲಭ್ಯಗಳು ನಿಗಧಿಯಾಗಿದ್ದು, ಸರ್ಕಾರದ ನಿರ್ದೇಶನವನ್ನು ಪಾಲಿಸಬೇಕು. ಕೌಶಲ್ಯ ಕಾರ್ಯಕ್ರಮದಡಿ ವಿವಿಧ ವೃತ್ತಿಪರ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಸರಿಯಾಗಿ ಖರ್ಚು ಮಾಡುವುದರ ಜತೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂದರ್ಭದಲ್ಲಿಯೂ ಸಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪರಿಶಿಷ್ಟ ಕಲಾವಿದರಿಗೆ ಆದ್ಯತೆ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ ರಾಜಾ ಸಲಹೆ ನೀಡಿದರು.


ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್‌ರವರು ವಿವಿಧ ಇಲಾಖೆಯ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು.


ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಸನ್ನ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಯೋಗೇಶ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ದೀಪಾಂಜಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಬಿಂದು, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ದನ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net