ರಾಜಕಾಲುವೆಗಳಲ್ಲಿ ಪ್ರವಾಹ ನಿಭಾಯಿಸಲು ತಂತ್ರಜ್ಞಾನದ ಬಳಕೆ

rajakaluve clean
Published on

ಬೆಂಗಳೂರು: ನಗರದಲ್ಲಿ ಸುರಿಯುವ ಭಾರೀ ಮಳೆಯಿಂದ ಉಂಟಾಗುವ ಸಮಸ್ಯೆಯನ್ನು ತಪ್ಪಿಸಲು ಬಿಬಿಎಂಪಿಯು ಈಗಾಗಲೇ ಕೆಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಈಗ ಪ್ರವಾಹ ನಿಭಾಯಿಸಲು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವತ್ತ ದೃಷ್ಟಿ ಹರಿಸಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹವನ್ನು ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ರಾಜಕಾಲುವೆಗಳಲ್ಲಿ ತಂತ್ರಜ್ಞಾನದ ಬಳಸಿಕೊಂಡು 124 ಕಡೆಗಳಲ್ಲಿ ನೀರಿನ ಮಟ್ಟ ಅಳೆಯುವ ಸಂವೇದಕಗಳನ್ನು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ವತಿಯಿಂದ ಅಳವಡಿಸಲಾಗಿದೆ. ಪ್ರತಿಯೊಂದು ಸೆನ್ಸಾರ್ ಯಂತ್ರಕ್ಕೂ ಸೋಲಾರ್ ವ್ಯವಸ್ಥೆ ಅಳವಡಿಸಲಾಗಿದೆ. ಅದರಿಂದ ನಿತ್ಯ ಅಂತರ್ಜಾಲದ ಮೂಲಕ ಕೆಎಸ್‌ಎನ್‌ಡಿಎಂಸಿ ನಿಯಂತ್ರಣ ಕೊಠಡಿಗೆ ಮಾಹಿತಿ ತಿಳಿಯಲಿದೆ. ಆ ಸಂಸ್ಥೆಯವರು ಪಾಲಿಕೆಯ ಇಂಟಿಗ್ರೇಟೆಡ್ ಕಮಾಂಡಿಂಗ್ ಕಂಟ್ರೋಲ್ ಸೆಂಟರ್‌ಗೆ ಮಾಹಿತಿ ರವಾನೆ ಮಾಡಲಿದ್ದಾರೆ.

ಸೆನ್ಸಾರ್ ಅಳವಡಿಸಿರುವ ಕಡೆ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯಬಹುದಾಗಿದೆ. ಅದರಂತೆ ಹಸಿರು, ನೀಲಿ, ಕೆಂಪು ಹಾಗೂ ಕಪ್ಪು ಬಣ್ಣದಲ್ಲಿ ಗುರುತಿಸಲಾಗುತ್ತದೆ. ಹಸಿರು ಹಾಗೂ ನೀಲಿ ಬಣ್ಣವಿದ್ದರೆ ಯಾವುದೇ ಅಪಾಯವಿರುವುದಿಲ್ಲ. ಕೆಂಪು ಬಣ್ಣವಿದ್ದರೆ ಅಪಾಯ ಎಂದರ್ಥ ಹಾಗೂ ಕಪ್ಪು ಬಣ್ಣಕ್ಕೆ ತಿರುಗಿದರೆ ಪ್ರವಾಹ ಉಂಟಾಗಲಿದೆ ಎಂಬ ಮಾಹಿತಿ ತಿಳಿಯಲಿದೆ. ಆ ಮಾಹಿತಿಗನುಗುಣವಾಗಿ ಪ್ರವಾಹ ಉಂಟಾಗುವ ಸ್ಥಳದ ಸುತ್ತಮುತ್ತಲಿನ ನಿವಾಸಿಗಳನ್ನು ಬೇರೆಡೆ ತೆರಳುವಂತೆ ಸೂಚನೆ ನೀಡಬಹುದು. ಇದರಿಂದ ಪ್ರವಾಹದಿಂದಾಗುವ ಅನಾಹುತಗಳನ್ನು ತಪ್ಪಿಸಬಹುದಾಗಿದೆ. ಇ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ನಾಲ್ಕು ವರ್ಷಗಳ ಹಿಂದೆಯೇ ಅಳವಡಿಸಿಕೊಂಡಿದ್ದು, ಇದೀಗ ಇತರ ಕಡೆಗಳಿಗೂ ವಿಸ್ತರಿಸಲಾಗುತ್ತಿದೆ.

860 ಕಿ.ಮೀ. ಉದ್ದದ ರಾಜಕಾಲುವೆ:

ಬಿಬಿಎಂಪಿ ವ್ಯಾಪ್ತಿಯಲ್ಲಿ 860 ಕಿ.ಮೀ. ಉದ್ದದ ರಾಜಕಾಲುವೆಯಿದ್ದು, ಈ ಪೈಕಿ 581 ಕಿ.ಮೀ. ಉದ್ದದಷ್ಟು ಆರ್‌ಸಿಸಿ ತಡೆಗೋಡೆಯಿಂದ ನಿರ್ಮಾಣ ಮಾಡಲಾಗಿದೆ. 199 ಕಿ.ಮೀ. ಉದ್ದದಷ್ಟು ಆರ್‌ಸಿಸಿ ತಡೆಗೋಡೆ ಕಾಮಗಾರಿಯು ಪ್ರಗತಿಯಲ್ಲಿದೆ. ಇನ್ನುಳಿದ 80 ಕಿ.ಮೀ. ರಾಜಕಾಲುವೆಯು ಕಚ್ಚಾ ಡ್ರೈನ್ ಒಳಗೊಂಡಿರುತ್ತದೆ.

ನಗರದಲ್ಲಿ ಪಕ್ಕಾ ಡ್ರೈನ್ 581 ಕಿ.ಮೀ. ಉದ್ದದ ಆರ್‌ಸಿಸಿ ತಡೆಗೋಡೆ ನಿರ್ಮಿಸಿರುವ ರಾಜಕಾಲುವೆಯ ಭಾಗದಲ್ಲಿ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಅದಲ್ಲದೆ ತೆಗೆದ ಹೂಳನ್ನು ಕೂಡಲೆ ತೆರವುಗೊಳಿಸಲಾಗುತ್ತಿದೆ. ಇದರ ಉಸ್ತುವಾರಿಗಾಗಿ ಪ್ರತ್ಯೇಕ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ನಗರದಲ್ಲಿ 74 ಕಡೆ ಪ್ರವಾಹ ಪೀಡಿತ ಪ್ರದೇಶಗಳಿದ್ದು, ಸದರಿ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಳೆಗಾಲದ ಹಿನ್ನೆಲೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹೊಸ ತಂತ್ರಜ್ಞಾನ ಅಳವಡಿಕೆಯಿಂದಾಗಿ ಪ್ರವಾಹ ತಡೆಗಟ್ಟುವ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪಾಲಿಕೆ ಸಜ್ಜಾಗಿದೆ.

- ವಿಕಾಸ್ ಕಿಶೋರ್ ಸುರೋಳ್ಕರ್, ಬಿಬಿಎಂಪಿ ವಿಶೇಷ ಆಯುಕ್ತ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net