

ವಿಜಯಪುರ : ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿರುವ ಹಕ್ಕುಗಳನ್ನು ಜವಾಬ್ದಾರಿಯಿಂದ ಬಳಸಬೇಕು ಎಂದು ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ.ಎಂ. ಜಯರಾಜ ಹೇಳಿದರು.
ನಗರದ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಡಾ. ಅಂಬೇಡ್ಕರ್ ಅವರು ದೇಶದಲ್ಲಿ ಮಾನವ ಹಕ್ಕುಗಳು ಮತ್ತು ಅಸ್ಪಶ್ಯತೆ ವಿರುದ್ಧ ಹೋರಾಟ ನಡೆಸಿದ್ದರು. ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಮತದಾನದ ಹಕ್ಕು ನೀಡಿದ್ದಾರೆ. ಈ ಹಕ್ಕನ್ನು ಜವಾಬ್ದಾರಿಯಿಂದ ಬಳಸಬೇಕು ಎಂದು ತಿಳಿಸಿದರು.
ಕಾನೂನು ಮಹಾವಿದ್ಯಾಲಯ ಪ್ರಾಚಾರ್ಯ ಡಾ. ರುವೀರ ಕುಲಕರ್ಣಿ ಅಂಬೇಡ್ಕರ್ ಅವರ ಸಮಾನತೆ ಮತ್ತು ಸಮಾಜದ ಶೋಷಿತ ವರ್ಗದ ಹಕ್ಕುಗಳ ಕುರಿತು ಮಾತನಾಡಿದರು.
ಆಸ್ಪತ್ರೆಯ ವೈದ್ಯಕಿಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಅಲೈಡ್ ಹೆಲ್ತ್ ಸೈನ್ಸ್ ಡೀನ್ ಡಾ. ಎಸ್.ವಿ. ಪಾಟೀಲ, ಡಾ. ಎಂ.ಎಂ. ಪಾಟೀಲ, ಡಾ. ಆನಂದ ಅಂಬಲಿ, ಡಾ. ಉದಯಕುಮಾರ ನುಚ್ಚಿ, ಡಾ. ಶ್ರೀಧರ ಬಗಲಿ ಮತ್ತಿತರರಿದ್ದರು.