ಶಿರಸಿ: ಸ್ಥಳೀಯ ಸಾರ್ವಜನಿಕರಿಗೆ ಅತ್ಯಾಧುನಿಕ ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 250 ಹಾಸಿಗೆಗಳ ಪಂಡಿತ್ ಜನರಲ್ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಅಧಿಕಾರಿಗಳೊಂದಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೂತನ ಆಸ್ಪತ್ರೆ ಕಟ್ಟಡದ ಕಾಮಗಾರಿ ಹಾಗೂ ಅಲ್ಲಿ ಸಾರ್ವಜನಿಕರಿಗೆ ಲಭ್ಯವಾಗಬೇಕಾದ ಮೂಲಭೂತ ಸೌಲಭ್ಯಗಳ ಕುರಿತು ಶಾಸಕರು ಅವಲೋಕಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು, ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಸೌಲಭ್ಯಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಯ ಕಟ್ಟಡ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದ ಶಾಸಕರು, ಬಾಕಿ ಇರುವ ಸಣ್ಣಪುಟ್ಟ ಕೆಲಸಗಳನ್ನು ತಕ್ಷಣ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಗೃಹ, ಸ್ವಚ್ಛತೆ ಮತ್ತು ಸುಸಜ್ಜಿತ ವಾರ್ಡ್‌ಗಳ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಶಾಸಕರು ಪರಿಶೀಲಿಸಿದರು. ಶೀಘ್ರದಲ್ಲೇ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳ ಅಳವಡಿಕೆ ಹಾಗೂ ಸಿಬ್ಬಂದಿ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಿರಸಿ ಮತ್ತು ಸಿದ್ದಾಪುರ ತಾಲೂಕಿನ ಸುತ್ತಮುತ್ತಲಿನ ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ 250 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಒಂದು ವರವಾಗಲಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮೂಲಭೂತ ಸೌಲಭ್ಯಗಳನ್ನು ಶೀಘ್ರವಾಗಿ ಒದಗಿಸಿ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಶಾಸಕ ಭೀಮಣ್ಣ ಹೇಳಿದರು.
ಸ್ಥಳೀಯ ಪ್ರಮುಖರಾದ ದೀಪಕ ದೊಡ್ಡೂರು, ಸುಮಾ ಉಗ್ರಾಣಕರ್, ರಘು ಕಾನಡೆ, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ, ನೇತ್ರಾವತಿ ಶಿರ್ಸಿಕರ್, ಇಂಜಿನಿಯರ್‌ಗಳು, ಪ್ರಮುಖ ಗುತ್ತಿಗೆದಾರರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.