Excessive rainfall ಅತಿವೃಷ್ಟಿ ಸಮಸ್ಯೆಗಳಿಗೆ ಸ್ಪಂದಿಸಲಿ

ಹೊನ್ನಾವರದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಹೊನ್ನಾವರದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
Published on

ಪ್ರಮುಖ ಮುಖ್ಯಾಂಶಗಳು

  • ಪರಿಶೀಲನೆ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಸೂಚನೆ

ಹೊನ್ನಾವರ:

ಅತಿವೃಷ್ಟಿ ಮತ್ತು ಅನಾವೃಷ್ಟಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಅಧಿಕಾರಿಗಳು ಸರಿಯಾದ ಮಾಹಿತಿಯನ್ನು ಸಂಗ್ರಹಿಸಿ ಸಮರ್ಪಕವಾಗಿ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚಿಸಿದರು.

ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ಭಟ್ಕಳ ಹಾಗೂ ಕುಮಟಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕುಮಟಾ ಮತ್ತು ಭಟ್ಕಳ ಉಪವಿಭಾಗ ಅಧಿಕಾರಿಗಳು ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಕುರಿತು ಮಾಹಿತಿಯನ್ನು ಸಚಿವರಿಗೆ ವಿವರಿಸಿದರು. ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ ಎಂದು ಸೂಚಿಸಿದರು.
ಪಶು ವೈದ್ಯಾಧಿಕಾರಿ ಬಸವರಾಜ ಸಭೆಗೆ ಮಾಹಿತಿ ನೀಡಿ, ನಮ್ಮಲ್ಲಿ ಜಾನುವಾರುಗಳ ಮೇವಿಗೆ ಬರವಿಲ್ಲ. 38 ವಾರಗಳಾಗುವಷ್ಟು ಮೇವು ಸಂಗ್ರಹವಿದೆ ಎಂದಾಗ ಸಮಾಧಾನ ವ್ಯಕ್ತಪಡಿಸಿದ ಸಚಿವರು, ಇದು ಉತ್ತರವಲ್ಲ, ಯಾರದೋ ಗದ್ದೆ, ತೋಟದಲ್ಲಿರುವ ಮೇವನ್ನು ಗುರುತಿಸಿ ಪುಸ್ತಕದ ದಾಖಲೆ ತೋರಿಸುವುದಲ್ಲ. ಎಷ್ಟು ಮೇವು ಸಂಗ್ರಹವಿದೆ ಎಂಬುದಕ್ಕೆ ತಪ್ಪು ಮಾಹಿತಿ ನೀಡಬೇಡಿ ಎಂದರು. ಕುಡಿಯುವ ನೀರಿಗೆ ಯಾವುದೇ ಕೊರತೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ಹೆಸ್ಕಾಂ ಇಲಾಖೆಯವರನ್ನು ಪ್ರಶ್ನಿಸಿ ಹಳೆಯ ಟ್ರಾನ್ಸ್‌ಫಾರ್ಮರ್, ಹಳೆಯ ತಂತಿ, ವಿದ್ಯುತ್ ಕಂಬ, ವಿದ್ಯುತ್ ಪರಿಕರಗಳು ದುಸ್ಥಿತಿಯಲ್ಲಿದ್ದರೆ ಕೂಡಲೇ ಬದಲಾಯಿಸಿ, ಪಾದಾಚಾರಿಗಳ ಮೇಲೆ ಬಿದ್ದು ಅನಾಹುತ ಆಗುವ ಮುಂಚೆ ಎಚ್ಚೆತ್ತುಕೊಳ್ಳಬೇಕು ಎಂದು ಸೂಚಿಸಿದರು. ತಾಲೂಕು ಆಸ್ಪತ್ರೆಗಳಲ್ಲಿ ಅನಸ್ತೇಶಿಯಾ ವೈದ್ಯರ ಕೊರತೆ ಇದೆ ಎಂದು ಕುಮಟಾ ತಾಲೂಕು ವೈದ್ಯಾಧಿಕಾರಿಗಳು ತಿಳಿಸಿದರು. ಆಗ ಖಾಸಗಿ ವೈದ್ಯರನ್ನು ಕರೆಯಿಸಲು ಅನುಮತಿಯಿದೆ. ಅಂತಹ ವೈದ್ಯರನ್ನು ಸಂಪರ್ಕಿಸಿ ಎಂದು ಸಚಿವರು ಸೂಚನೆ ನೀಡಿದರು.
ಜಿಲ್ಲೆಯ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಬಗ್ಗೆ ಪರಿಶೀಲನೆ ನಡೆಸಲು ಮಾತ್ರ ಜಿಲ್ಲಾ ಉಸ್ತುವಾರಿ ಸಚಿವನಾಗಿ ಈಗ ಬಂದಿದ್ದೇನೆ. ಹೀಗಿದ್ದೂ ಇಲ್ಲಿನ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಪ್ರಯತ್ನ ಮಾಡುತ್ತೇನೆ. ಹೊನ್ನಾವರ, ಭಟ್ಕಳ ಮತ್ತು ಕುಮಟಾ ತಾಲೂಕಿನ ಮಾಹಿತಿ ಸಂಗ್ರಹಿಸಲಾಗಿದೆ. ಸಂಗ್ರಹಿಸಿದ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಯ ಸಚಿವರೊಟ್ಟಿಗೆ ಮಾತನಾಡಿ ಶೀಘ್ರ ಪರಿಹಾರ ಒದಗಿಸಲು ಪ್ರಯತ್ನಿಸುತ್ತೇನೆ ಎಂದರು.
ತಾಲೂಕಾಸ್ಪತ್ರೆ ವೈದ್ಯಾಧಿಕಾರಿ ಡಾ. ರಾಜೇಶ ಕಿಣಿ ಮಾತನಾಡಿ, ನಮ್ಮ ಆಸ್ಪತ್ರೆಗೆ ಕುಡಿದು ಬಂದು ಗಲಾಟೆ ಮಾಡುತ್ತಾರೆ. ರಕ್ಷಣೆಗೆ ಪೊಲೀಸ್ ಸಿಬ್ಬಂದಿ ನೇಮಿಸಬೇಕು. ಗಲಾಟೆಯಾದಾಗ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದಾಗ ಎಲ್ಲ ಮುಗಿದ ಮೇಲೆ ಪೊಲೀಸರು ಬರುತ್ತಾರೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಲಕ್ಷ್ಮಣ ಸವದಿ, ನೀವು ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದಾಗ ಮಾತ್ರ ಅವರ ಸಂಬಂಧಿಗಳು ಗಲಾಟೆ ಮಾಡುತ್ತಾರೆ. ನೀವು ಜವಾಬ್ದಾರಿಯಿಂದ ನಿಮ್ಮ ಕರ್ತವ್ಯ ನಿರ್ವಹಿಸಿ ಎಂದು ಸೂಚಿಸಿದರು.
ಶಾಸಕರಾದ ದಿನಕರ ಶೆಟ್ಟಿ, ಶಿವರಾಮ ಹೆಬ್ಬಾರ, ಭೀಮಣ್ಣ ನಾಯ್ಕ, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಪಂ ಸಿಇಒ ದಿಲೀಪ್ ಶಶಿ, ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಸತೀಶ ನಾಯ್ಕ ಇತರರು ಉಪಸ್ಥಿತರಿದ್ದರು. ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net