ಸಿದ್ದಾಪುರ ತಾಲೂಕಿನ ಹೇರೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕೆಎಫ್‌ಡಿ (KFD) ಮುನ್ನೆಚ್ಚರಿಕೆ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿದರು. ಎಂ.ಆರ್. ಕುಲಕರ್ಣಿ, ದೇವರಾಜ ಹಿತ್ತಲಕೊಪ್ಪ, ಡ.ಸತೀಶ ಶೆಟ್ಟಿ, ಡಾ.ಲಕ್ಷ್ಮೀಕಾಂತ ನಾಯ್ಕ ಇತರರಿದ್ದರು.
ಸಿದ್ದಾಪುರ:ಸಾರ್ವಜನಿಕರ ಆರೋಗ್ಯ ರಕ್ಷಣೆ ನಮ್ಮ ಮೊದಲ ಆದ್ಯತೆ. ಮಂಗನ ಕಾಯಿಲೆಯ (KFD) ಭೀತಿ ಹೋಗಲಾಡಿಸಲು ಸರ್ಕಾರ ಮತ್ತು ಆಡಳಿತ ಯಂತ್ರ ಸನ್ನದ್ಧವಾಗಿದೆ.
ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಆದರೆ, ಜನತೆ ಆರೋಗ್ಯ ಇಲಾಖೆ ನೀಡುವ ಮುನ್ನೆಚ್ಚರಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ತಾಲೂಕಿನ ಹೇರೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗನ ಕಾಯಿಲೆ ತಡೆಗಟ್ಟುವ ಕುರಿತು ಆಯೋಜಿಸಿದ್ದ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಮಂಗನ ಕಾಯಿಲೆ ಹರಡದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕು. ಗ್ರಾಮೀಣ ಭಾಗದ ಜನರಲ್ಲಿ ಈ ಕುರಿತು ಹೆಚ್ಚೆಚ್ಚು ಜಾಗೃತಿ ಮೂಡಿಸಲು ಮುಂದಾಗಬೇಕು.
ಅಧಿಕಾರಿಗಳು ಮೌನವಾಗಿದ್ದರೆ ಆಗುವುದಿಲ್ಲ. ಆಸ್ಪತ್ರೆಗಳಲ್ಲಿ ಅಗತ್ಯ ಇರುವ ಲಸಿಕೆಗಳು, ಔಷಧಗಳು ಹಾಗೂ ಚಿಕಿತ್ಸಾ ಉಪಕರಣಗಳ ದಾಸ್ತಾನು ಸಮರ್ಪಕವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.
ಅರಣ್ಯ ಪ್ರದೇಶದ ಸಮೀಪ ಇರುವ ಹಳ್ಳಿಗಳ ಜನರು ಕಾಡಿಗೆ ಹೋಗುವಾಗ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ನೀಡಬೇಕು.
ಆರೋಗ್ಯ, ಅರಣ್ಯ ಮತ್ತು ಕಂದಾಯ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ರೋಗದ ಲಕ್ಷಣ ಕಂಡುಬಂದಲ್ಲಿ ಕೂಡಲೇ ಸ್ಪಂದಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷವಹಿಸಬಾರದು ಎಂದು ಎಚ್ಚರಿಕೆ ನೀಡಿದರು.
ತಹಸೀಲ್ದಾರ ಎಂ.ಆರ್. ಕುಲಕರ್ಣಿ, ತಾಪಂ ಇಒ ದೇವರಾಜ ಹಿತ್ತಲಕೊಪ್ಪ, ಡಾ.ಸತೀಶ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ನಾಯ್ಕ, ಅರಣ್ಯ, ಕಂದಾಯ ಹಾಗೂ ಆರೋಗ್ಯ ಇಲಾಖೆ ಗ್ರಾಪಂ ಅಧಿಕಾರಿಗಳು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.