

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನನ್ನು ಎನ್‌ಕೌಂಟರ್ ಮಾಡಬೇಕು ಎಂದು ನಗರ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಉಪ ಮೇಯರ್ ವಿ.ಶೈಲೇಂದ್ರ ಒತ್ತಾಯಿಸಿದ್ದಾರೆ.
ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಹಿರಿಯ ವಕೀಲ ರಾಕೇಶ್ ಕಿಶೋರ್ ಶೂ ಎಸೆಯಲು ಮುಂದಾದ್ದು ಖಂಡನೀಯ. ಇಂತಹ ಹೇಯ ಕೃತ್ಯ ನಡೆದಿರುವುದು ದೇಶದ ಎಲ್ಲ ಸಾರ್ವಜನಿಕರು ತಲೆತಗ್ಗಿಸುವಂತಾಗಿದೆ. ಕಾನೂನು ಸಂರಕ್ಷಣೆ ಮಾಡುವ ವಕೀಲರೇ ಕಾನೂನನ್ನು ಕೈಗೆತ್ತಿಕೊಂಡರೆ ದೇಶದ ಕಾನೂನು ಯಾವ ದಿಕ್ಕಿನಲ್ಲಿ ಹೋಗುತ್ತಿದೆ ಎಂಬ ಆತಂಕ ಮೂಡಿಸುತ್ತದೆ. ಒಬ್ಬ ಹಿರಿಯ ವಕೀಲ ಈ ರೀತಿ ನಡೆದುಕೊಂಡರೆ ಭಾರತ ದೇಶದ ಸಂವಿಧಾನ ಹಾಗೂ ಅಂಬೇಡ್ಕರ್ ಅವರಿಗೆ ಘೋರ ಅಪಮಾನ ಮಾಡಿದಂತೆ ಎಂದು ತಿಳಿಸಿದ್ದಾರೆ.
ದೇಶದ ಪ್ರಥಮ ಪ್ರಜೆಗೆ ಅಧಿಕಾರ ಬೋಧಿಸುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಇಂಥ ಅಪಮಾನ ಮಾಡಿರುವುದನ್ನು ಎಲ್ಲರೂ ಖಂಡಿಸಬೇಕು. ಅಂಬೇಡ್ಕರ್ ಕೊಟ್ಟಂತಹ ಸಂವಿಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕು. ದೇಶದಲ್ಲಿ ಇಂತಹ ಕಾನೂನುಬಾಹಿರ ಘಟನೆಗಳು ನಡೆದಂತೆ ಗೃಹ ಇಲಾಖೆ ಎಚ್ಚರ ವಹಿಸಬೇಕು. ಕೂಡಲೇ ಬಂಧಿಸಿ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜತೆಗೆ ಘಟನೆಯ ಹಿಂದೆ ಯಾರ ಕೈವಾಡವಿದೆ ಎಂದು ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.