

ಮೈಸೂರು: ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಕೆಪಿಎಸ್‌ಸಿ ಮೂಲಕ ಭರ್ತಿ ಮಾಡಲಾಗುತ್ತದೆ ಎಂದರು.
ಬರದ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಮೇವನ್ನು ಹೊರ ರಾಜ್ಯಗಳಿಗೆ ಸಾಗಾಣಿಕೆ ಮಾಡದಂತೆ ಈಗಾಗಲೇ ನಿರ್ಬಂಧ ಹೇರಲಾಗಿದೆ. ಜತೆಗೆ ನೀರಾವರಿ ಸೌಲಭ್ಯ ಇರುವ ರೈತರಿಗೆ ರಾಜ್ಯದಾದ್ಯಂತ ಮೇವಿನ ಬೀಜಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.