ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲಾ ರಾಸುಗಳಿಗೆ ಲಸಿಕೆ ಕೊಡಿಸಿ: ನಂಜುಂಡೇಗೌಡ

5adarshkdga3
Published on


ಮಡಿಕೇರಿ: ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಅಭಿಯಾನ ಕೊಡಗು ಜಿಲ್ಲೆಯಾದ್ಯಂತ ನ೭ ರಿಂದ ಡಿ೭ ರವರೆಗೆ ನಡೆಯಲಿದ್ದು, ನಾಲ್ಕು ತಿಂಗಳು ಮೇಲ್ಪಟ್ಟ ಎಲ್ಲಾ ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಕೋರಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗ ನಿಯಂತ್ರಣ ಮೂರನೇ ಸುತ್ತಿನ ಲಸಿಕಾ ಅಭಿಯಾನದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಮೂರನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ದನ, ಎಮ್ಮೆ, ಕುರಿ, ಹಂದಿ ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಕಾಲುಬಾಯಿ ರೋಗ ಕಾಣಿಸಿಕೊಳ್ಳಲಿದ್ದು, ಇದರಿಂದ ರೈತರಿಗೆ ಅಪಾರ ಆರ್ಥಿಕ ನಷ್ಟವಾಗುತ್ತದೆ. ಆದ್ದರಿಂದ ಜಾನುವಾರು ಲಸಿಕಾದಾರರು ಮನೆ ಮನೆಗೆ ಭೇಟಿ ನೀಡಿದಾಗ ಕಾಲುಬಾಯಿ ಜ್ವರ ರೋಗ ನಿಯಂತ್ರಣ ಲಸಿಕೆ ನೀಡಲು ಎಲ್ಲಾ ರೀತಿಯ ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಜಾನುವಾರುಗಳಿಗೆ ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು, ರೋಗದಿಂದ ಗುಣವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಕಡಿಮೆಯಾಗಲಿದ್ದು, ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಭ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕಡಿಮೆಯಾಗುತ್ತದೆ. ಆದ್ದರಿಂದ ಈ ಬಗ್ಗೆ ರೈತರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು.


ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಸುರೇಶ್ ಭಟ್ ಮಾತಾನಾಡಿ, ಕಾಲುಬಾಯಿ ರೋಗ ನಿಯಂತ್ರಿಸಲು ಜಾನುವಾರುಗಳಿಗೆ ಲಸಿಕೆ ಹಾಕಿಸುವುದೊಂದೇ ಏಕೈಕ ಮಾರ್ಗವಾಗಿದೆ. ಈ ರೋಗದ ವಿರುದ್ಧ ಪ್ರತೀ ಆರು ತಿಂಗಳಿಗೊಮ್ಮೆ ಲಸಿಕೆ ಕೊಡಿಸಿ ರೋಗ ಬರದಂತೆ ತಡೆಗಟ್ಟಬಹುದಾಗಿದೆ. ರಾಷ್ಟ್ರೀಯ ಕಾಲು ಬಾಯಿ ಜ್ವರ ರೋಗ ನಿಯಂತ್ರಣ ಕಾರ್ಯಕ್ರಮ ಅಭಿಯಾನದಲ್ಲಿ ೬೬,೨೫೦ ಲಸಿಕೆ ಪೂರೈಕೆಯಾಗಿದೆ. ಜತೆಗೆ ಈಗಾಗಲೇ ೧೦,೭೦೦ ಲಸಿಕೆ ಜಿಲ್ಲೆಯಲ್ಲಿ ದಾಸ್ತಾನು ಇದ್ದು, ಪಶು ವೈದ್ಯಾಧಿಕಾರಿಗಳು, ರೈತರು/ ಜಾನುವಾರು ಮಾಲೀಕರ ಮನೆ ಮನೆಗೆ ಲಸಿಕಾದಾರರು ತೆರಳಿ ಲಸಿಕೆ ನೀಡಲಿದ್ದಾರೆ ಎಂದು ವಿವರಿಸಿದರು.


೨೦ನೇ ಜಾನುವಾರು ಗಣತಿಯಂತೆ ಕೊಡಗು ಜಿಲ್ಲೆಯಲ್ಲಿ ದನ ಹಾಗೂ ಎಮ್ಮೆಗಳ ಸಂಖ್ಯೆ ೭೬,೯೨೦ ಇದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ಲಸಿಕೆ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.


’ಲಸಿಕೆಯು ಸಂಪೂರ್ಣ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗೆ ಬಂದಾಗ ಸಹಕಾರ ನೀಡಿ ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲಾ ದನ/ ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಕೋರಿದರು.


ಈ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಮತ್ತು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ವತಿಯಿಂದ ಹೊರತಂದಿರುವ ಕಾಲು ಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನದ ಕರಪತ್ರವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.


ಸಭೆಯಲ್ಲಿ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಪ್ರಸನ್ನ(ಮಡಿಕೇರಿ), ಡಾ.ಶಾಂತೇಶ್(ಪೊನ್ನಂಪೇಟೆ), ಡಾ.ಬಾದಾಮಿ(ಸೋಮವಾರಪೇಟೆ), ಡಾ.ಲತಾ(ಮಡಿಕೇರಿ), ಡಾ.ಶ್ರೀದೇವು(ಕುಶಾಲನಗರ), ಡಾ.ನವೀನ್(ವಿರಾಜಪೇಟೆ) ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದ ಕುಶಾಲನಗರ ಕೂಡಿಗೆ ಹಾಲಿನ ಡೈರಿ ಡಾ.ಪ್ರಸನ್ನ ಕುಮಾರ್ ಇತರರಿದ್ದರು.

ಸಂಪರ್ಕ ಸಂಖ್ಯೆಗಳು
ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಅಭಿಯಾನ ಸಂಬಂಧ ಹೆಚ್ಚಿನ ಮಾಹಿತಿಗೆ ಆಯಾಯ ತಾಲೂಕಿನ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ. ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಮಡಿಕೇರಿ(೯೪೪೮೬೪೭೨೭೬), ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಸೋಮವಾರಪೇಟೆ(೯೪೪೮೬೫೫೬೬೦), ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ವಿರಾಜಪೇಟೆ(೯೧೪೧೦೯೩೯೯೬), ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಕುಶಾಲನಗರ(೮೯೫೧೪೦೪೦೨೫) ಹಾಗೂ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಪೊನ್ನಂಪೇಟೆ(೯೪೪೯೦೮೧೩೪೩) ನ್ನು ಸಂಪರ್ಕಿಸಬಹುದು.

೭ರಂದು ಲಸಿಕೆ ಎಲ್ಲಿಲ್ಲಿ?
ನ೭ ರಂದು ಮಡಿಕೇರಿ ತಾಲೂಕಿನ ಚೆಂಬು, ಊರುಬೈಲು, ಕುದುರೆಪಾಯ, ಮೇಲ್ಚೆಂಬು, ಕೊಕೇರಿ, ಮದೆನಾಡು, ತಣ್ಣಿಮಾನಿ, ವಿರಾಜಪೇಟೆ ತಾಲ್ಲೂಕಿನ ಹೆಗ್ಗಳ, ಅರಮೇರಿ, ಕುಂಜಿಲಗೇರಿ, ಬಿಳುಗುಂದ, ಸಿದ್ದಾಪುರ, ಸೋಮವಾರಪೇಟೆ ತಾಲೂಕಿನ ಬೇಳೂರು ಬಸವನಹಳ್ಳಿ, ಕುಂಬೂರು, ಹಾರೂಹಳ್ಳಿ, ನಿಡ್ತ, ಅವರೆದಾಳು, ಊರುಗುತ್ತಿ, ಹಾಗೂ ಕುಶಾಲನಗರ ತಾಲೂಕಿನ ಕೂಡುಮಂಗಳೂರು, ಅಂಜಲಗೇರಿ ಬೆಟ್ಟಗೇರಿ, ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಅರಣ್ಯ, ನಾಲ್ಕೇರಿ, ಮತ್ತೂರು, ಹೈಸೂಡ್ಲೂರು, ಬಾಳಲೆಯಲ್ಲಿ ಲಸಿಕೆ ಹಾಕಲಾಗುತ್ತದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಸುರೇಶ್ ಭಟ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net