ಏ.೧ರಿಂದ ಜಾನುವಾರುಗಳಿಗೆ ಲಸಿಕಾ ಕಾರ್ಯಕ್ರಮ

kaalubayi jwara
Published on

ಮಡಿಕೇರಿ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೫ನೇ ಸುತ್ತಿನಲ್ಲಿ ಏ೧ ರಿಂದ ೩೦ ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ ತಿಳಿಸಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾರವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.


ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ರೋಗವು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ ಎಂದರು.


ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು, ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ ಎಂದು ಮಾಹಿತಿ ನೀಡಿದರು.


ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ. ಈ ರೋಗದ ವಿರುದ್ಧ ಪ್ರತಿ ೬ ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬರದಂತೆ ತಡೆಗಟ್ಟಬಹುದಾಗಿದೆ. ಕೊಡಗು ಜಿಲ್ಲೆಯಲ್ಲಿ ೨೦ ನೇ ಜಾನುವಾರು ಗಣತಿಯಂತೆ ದನ ಹಾಗೂ ಎಮ್ಮೆಗಳ ಸಂಖ್ಯೆ ೭೬,೯೨೦ ಇದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು, ೭೦ ಲಸಿಕಾ ದಾರರನ್ನು ಒಳಗೊಂಡ ಒಟ್ಟು ೧೧ ತಂಡಗಳನ್ನು ರಚಿಸಲಾಗಿದೆ. ಲಸಿಕಾದಾರರು ರೈತರ/ ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆ ನೀಡಲಿದ್ದಾರೆ ಎಂದು ವಿವರಿಸಿದರು.


ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಮಡಿಕೇರಿ ದೂ.ಸಂ. ೯೪೪೮೬೪೭೨೭೬ ನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ವಿವಿಧ ಇಲಾಖೆ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net