

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಗರ್ಭಿಣಿ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಲಸಿಕೆ ಪಡೆಯುವುದು ಅವಶ್ಯಕವಾಗಿದ್ದು ಗರ್ಭಿಣಿ, ಮಕ್ಕಳಿಗೆ ಲಸಿಕೆ ಹಾಕಿಸಲು ಪಾಲಕರಿಗೆ ಅರಿವು ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆ ಹಾಗೂ ಜಿಲ್ಲಾ ಮಟ್ಟದ ತಾಯಿ ಹಾಗೂ ಶಿಶು ಮರಣ ಪರಿಶೀಲನಾ ಸಮಿತಿ ಸಭೆಯಲ್ಲಿ ವಹಿಸಿ ಮಾತನಾಡಿದರು. ಮಕ್ಕಳ ಹಾಗೂ ಗರ್ಭಿಣಿ ಬಾಣಂತಿಯರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ ಶಿಶು ಮತ್ತು ತಾಯಿ ಮರಣ ಆಗದಂತೆ ಜಾಗೃತಿ ವಹಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗರ್ಭಿಣಿ, ಬಾಣಂತಿಯರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ ಶಿಶು ಪೋಷಣೆ ಮತ್ತು ಗರ್ಭಿಣಿ, ಬಾಣಂತಿಯರ ಆರೈಕೆಯಲ್ಲಿ ನಿರತರಾಗಬೇಕು ಎಂದು ಸೂಚಿಸಿದರು.
ಅರಿವು ಮೂಡಿಸುವುದು ಮುಖ್ಯ:
ವಾತಾವರಣ ಬದಲಾವಣೆ ಸಂಧರ್ಭದಲ್ಲಿ ಡೆಂಘೆ. ಮಲೇರಿಯಾ, ಚಿಕೂನ್‌ಗುನ್ಯಾ ಪ್ರಕರಣಗಳು ಉಲ್ಬಣಗೊಳ್ಳುವ ಸಂಭವ ಇರುತ್ತದೆ ಹಾಗಾಗಿ ಆರೋಗ್ಯಾಧಿಕಾರಿಗಳು ಜಾಗೃತರಾಗಿ ಸ್ಥಳೀಯ ಮಟ್ಟದಲ್ಲಿ ಜನ ನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಎಡಿಸಿ ತಿಳಿಸಿದರು. ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ರೋಗಗಳು ಕಂಡು ಬರುತ್ತಿವೆ ಅದಕ್ಕಾಗಿ ರೋಗಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.