ಅ.17ರಂದು ವಾಲ್ಮೀಕಿ ಜಯಂತಿ ಆಚರಣೆ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

Valmiki Jayanti Pre Meeting Mandya
Published on

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಅ.17ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅವರ ಕೊಡುಗೆ, ಸಾಧನೆ ಅಪಾರ. ಅವರ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಸಂಘ ಸಂಸ್ಥೆಗಳ ಮುಖ್ಯಸ್ಥರು ಹೆಚ್ಚಿನ ಜನರನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಿಸಬೇಕು ಎಂದು ಹೇಳಿದರು.

ಅಂದು ಬೆಳಗ್ಗೆ 9.30ಕ್ಕೆ ಸಿಲ್ವರ್ ಜ್ಯೂಬಿಲಿ ಉದ್ಯಾನದಿಂದ ಜಿಲ್ಲಾ ಪಂಚಾಯಿತಿವರೆಗೆ ಮೆರವಣಿಗೆ ನಡೆಯಲಿದೆ. ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿದೆ. ಇದರೊಂದಿಗೆ ಪೂರ್ಣಕುಂಭ ಹೊತ್ತ ಮಹಿಳೆಯರು ಭಾಗವಹಿಸಿ ಮೆರವಣಿಗೆಗೆ ವಿಶೇಷ ಮೆರಗು ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು. ಇದಲ್ಲದೆ ಕೃಷಿ, ಶಿಕ್ಷಣ ಹಾಗೂ ಸಾಹಿತ್ಯ ಸೇರಿದಂತೆ ಒಟ್ಟು ಐದು ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಅಭಿನಂದಿಸಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆಯಾಗಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯ ಮುದ್ರಣ ಹಾಗೂ ವಿತರಣೆಯ ಕೆಲಸವಾಗಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ.ಸಿದ್ದಲಿಂಗೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ, ಎಸ್‌ಐ ಕೆ.ಎನ್.ಕೇಶವಮೂರ್ತಿ, ಬಿಇಒ ಮಹದೇವು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಎಸ್.ಎಸ್.ಕೋಮಲ್ಕುಮಾರ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಾ, ನಗರಸಭೆ ಪರಿಸರ ಇಂಜಿನಿಯರ್ ರುದ್ರೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net