

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡುವುದು ಮುಖ್ಯವಾಗಿದೆ ಈ ಹಿನ್ನೆಲೆಯಲ್ಲಿ ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾದ ‘ವನ ಮಹೋತ್ಸವ-2024’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪರಿಸರ ಸಮತೋಲನ ಕಾಪಾಡಿಕೊಂಡಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆಯಾಗಿ ಪರಿಸರ ಸುಸ್ಥಿತಿಯಲ್ಲಿರುವ ಪರಿಸರವನ್ನು ಕಾಣಬಹುದು ಎಂದು ಹೇಳಿದರು.
ರೈತರು ತಮ್ಮ ಜಮೀನುಗಳಲ್ಲಿ ಮೂರನೇ ಒಂದು ಭಾಗ ಮಾವು, ತೆಂಗು, ಹಲಸು, ನೇರಳೆ ಮುಂತಾದ ಆದಾಯದ ಗಿಡ-ಮರಗಳನ್ನು ಬೆಳೆಸಿದರೆ ಆದಾಯದ ಜತೆಗೆ ಪರಿಸರ ಸಮತೋಲನ ನಿರ್ಮಾಣವಾಗುತ್ತದೆ. ಬೆಟ್ಟ-ಗುಡ್ಡ ಪ್ರದೇಶಗಳಲ್ಲಿ ಗಿಡ ಮರಗಳನ್ನು ಬೆಳೆಸುವುದರಿಂದ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುವುದನ್ನು ತಪ್ಪಿಸಬಹುದು ಎಂದು ಸಲಹೆ ನೀಡಿದರು. ಜಿಲ್ಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಸ್ತೆಗಳ ಎರಡು ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಮರಗಳನ್ನು ನೆಡಲಾಗುತ್ತಿದೆ. ಪ್ರತಿಯೊಬ್ಬರೂ ಮನೆಗಳ ಸುತ್ತಮುತ್ತ ಗಿಡ ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು. ಇದರಿಂದ ವಾತಾವರಣದ ಮಾಲಿನ್ಯವನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದರು.
ಪರಿಸರ ಅಸಮತೋಲನ ರಕ್ಷಣೆ ಮುಖ್ಯ:
ಇಂದು ನಾವು ಅನೇಕ ಕಾರಣಗಳಿಂದ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಅರಣ್ಯಗಳನ್ನು ನಾಶಗೊಳಿಸುವ ಕೆಲಸ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇದು ಪರಿಸರ ಅಸಮತೋಲನಕ್ಕೆ ಕಾರಣವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು. ಅರಣ್ಯ ಇಲಾಖೆ ವತಿಯಿಂದ ನೆಡು ತೋಪು ಸೇರಿ ವಿವಿಧ ಕಾರ್ಯಕ್ರಮಗಳ ಮೂಲಕ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಹಾಗೆಯೇ ನೆಟ್ಟ ಸಸಿಗಳನ್ನು ಕಾಳಜಿಯಿಂದ ಜೋಪಾನ ಮಾಡುವ ಬಗ್ಗೆ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಇಲಾಖೆಯಿಂದ ವಿವಿಧ ಕಾರ್ಯಕ್ರಮ:
ಬೆಂಗಳೂರು ಗ್ರಾಮಾಂತರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ ಸಿಕ್ಕಲಿಗಾರ್ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯು 2,298 ಕಿ.ಮೀ ವ್ಯಾಪ್ತಿ ಹೊಂದಿದ್ದು 22,800 ಹೆಕ್ಟೇರ್‌ಭೂ ವಿಸ್ತೀರ್ಣ ಹೊಂದಿದೆ. 203.89 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದೆ. ಒಟ್ಟು ಭೂ ಪ್ರದೇಶದಲ್ಲಿ ಶೇ.8.8 ಅರಣ್ಯ ಭೂಮಿ ಆವೃತ್ತಿಯಾಗಿದೆ. ಈ ನಿಟ್ಟಿನಲ್ಲಿ ಪರಿಸರ ಸಮತೋಲನ ಕಾಪಾಡುವ ದೃಷ್ಟಿಯಿಂದ ಅರಣ್ಯೀಕರಣ, ವನ್ಯಜೀವಿ ಸಂರಕ್ಷಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಕಳೆದ ಐದು ವರ್ಷಗಳಲ್ಲಿ 2400 ಹೆಕ್ಟೇರ್ ನೆಡುತೋಪು ಮಾಡಲಾಗಿದೆ. 383 ರೈತ ಫಲಾನುಭವಿಗಳಿಗೆ 16 ಲಕ್ಷ ಸಸಿಗಳನ್ನು ವಿತರಿಸಲಾಗಿದ್ದು ಗಿಡಗಳನ್ನು ಬೆಳೆಸಿ ಪೋಷಿಸಲು ಇದುವರೆಗೆ 74 ಲಕ್ಷ ರೂ.ಗಳ ಹಣ ರೈತ ಫಲಾನುಭವಿಗಳಿಗೆ ನೀಡಲಾಗಿದೆ ಎಂದು ತಿಳಿಸಿದರು. ಎಸ್‌ಸಿಪಿ,ಟಿಎಸ್‌ಪಿ ಯೋಜನೆಯಡಿ 3065 ಫಲಾನುಭವಿಗಳಿಗೆ ಸಸಿ ವಿತರಿಸಿ ವಿವಿಧ ಸೌಲಭ್ಯ ಕಲ್ಪಿಸಲಾಗಿದೆ. 2024 ನೇ ಸಾಲಿನಲ್ಲಿ 251 ಲಕ್ಷ ರೂ.ಗಳ ಯೋಜನಾ ವೆಚ್ಚ ರೂಪಿಸಲಾಗಿದ್ದು 165 ಕಿಲೋ ಮೀಟರ್ ನೆಡುತೋಪು ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.
.