

ಉಡುಪಿ: ಗೋವಾ-ಮುಂಬೈ ನಡುವೆ ಶೀಘ್ರವೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಆರಂಭಿಸಲಿದ್ದು, ಇದನ್ನು ಮಂಗಳೂರಿನವರೆಗೆ ವಿಸ್ತರಿಸುವಂತೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೂಲಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದರು.
ವಂದೇ ಭಾರತ್ ರೈಲನ್ನು ಮಂಗಳೂರಿನ ತನಕ ವಿಸ್ತರಿಸಿದ್ದಲ್ಲಿ ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ಕಾರವಾರದಿಂದ ತಿರುಪತಿವರೆಗೆ ಬೆಂಗಳೂರು ಮಾರ್ಗವಾಗಿ ಹೊಸದಾಗಿ ರೈಲ್ವೆ ಆರಂಭ ಮಾಡಿದ್ದಲ್ಲಿ ಕರಾವಳಿ ಜಿಲ್ಲೆಗಳ ಹೆಚ್ಚಿನ ಉದ್ಯಮಗಳಿಗೆ ಹಾಗೂ ಮೀನುಗಾರರಿಗೆ, ಪ್ರವಾಸಿಗರಿಗೆ, ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ವಿವರಿಸಿದ್ದಾರೆ.
ಡಿಸೆಂಬರ್ ತಿಂಗಳಿನಿಂದ ಜನವರಿ ಅಂತ್ಯದವರೆಗೆ ಉಡುಪಿ ಮಂಗಳೂರಿನಿಂದ ತೆರಳುವ ಶಬರಿಮಲೆ ಯಾತ್ರಾರ್ಥಿಗಳಿಗೆ ವಿಶೇಷ ರೈಲಿನ ವ್ಯವಸ್ಥೆ ಮಾಡುವಂತೆ ಕೂಡ ಮನವಿ ಮಾಡಿದ್ದಾರೆ. ಮನವಿಯನ್ನು ಸ್ವೀಕರಿಸಿದ ಸಚಿವೆ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸುವುದಾಗಿ ಭರವಸೆ ನೀಡಿದರು.