

ಬೆಳಗಾವಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಕಾರ್ಮಿಕರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿ, ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಹೆಸರು ನೋಂದಣಿ ಮಾಡಿಸಿ ಗುರುತಿನ ಚೀಟಿ ನೀಡಬೇಕು. ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ದೊರೆಯುವ ಆರ್ಥಿಕ ಸೌಲಭ್ಯಗಳನ್ನು ದೊರಕಿಸಿಕೊಡಬೇಕು. ಮದುವೆ, ಶೈಕ್ಷಣಿಕ ಧನಸಹಾಯ ಒದಗಿಸಬೇಕು.
ಲಾಕ್‌ಡೌನ್ ಅವಧಿಯ ಸಹಾಯಧನ 5 ಸಾವಿರ ರೂ. ನೀಡುವುದು, ಹೊಸ ಕಟ್ಟಡ ಕಾರ್ಮಿಕರ ನೋಂದಣಿ ಮತ್ತು ಬಾಕಿ ಇರುವ ಅರ್ಜಿಗಳ ವಿಲೇವಾರಿ ಮಾಡಬೇಕು. ಕಾರ್ಮಿಕ ಇಲಾಖೆಯಿಂದ ದೊರೆಯುವ ರೇಷನ್ ಕಿಟ್ ಶೀಘ್ರ ಸಿಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಶಿವಾಜಿ ಕಾಗಣಿಕರ, ಎನ್.ಆರ್.ಲಾತೂರ, ಕಿರಣಕುಮಾರ ಪಾಟೀಲ, ಅಡಿವೆಪ್ಪ ಕಂಬರಗಿ ಮತ್ತಿತರರು ಉಪಸ್ಥಿತರಿದ್ದರು.