

ಮಡಿಕೇರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ೨೦೨೫-೨೬ನೇ ಸಾಲಿನಲ್ಲಿ ಕಾರ್ಮಿಕ ಆಯವ್ಯಯ ತಯಾರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಿಧ ಚಟುವಟಿಕೆಗಳ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ವಿರಾಜಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸಿ.ಅಪ್ಪಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾಗಿರುವ ಮಹಾತ್ಮ ಗಾಂಧಿ ನರೇಗಾ ಯೋಜನೆಯು ಗ್ರಾಮೀಣಾಭಿವೃದ್ಧಿಯಲ್ಲಿ ಅತ್ಯಂತ ಬಹಳ ಪ್ರಮುಖವಾದ ಯೋಜನೆಯಾಗಿದೆ. ಈ ಯೋಜನೆಯಡಿ ೨೦೨೫-೨೬ನೇ ಸಾಲಿನ ಕ್ರಿಯಾ ಯೋಜನೆ ಸಿದ್ದಪಡಿಸುವ ಸಂಬಂಧ ಅ.೩೧ರ ವರೆಗೆ ಮಾಹಿತಿ ಶಿಕ್ಷಣ ಮತ್ತು ಸಂವಹನದ ಅಭಿಯಾನದಡಿ ಮನೆ ಮನೆ ಜಾಥಾ ಹಮ್ಮಿಕೊಂಡು ಗ್ರಾಮಸ್ಥರಿಗೆ ಹಾಗೂ ರೈತರಿಗೆ ಯೋಜನೆಯಡಿ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ವೈಯಕ್ತಿಕ ಕಾಮಗಾರಿಗಳ ಬೇಡಿಕೆ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಇರುವ ಪ್ರತಿ ಗ್ರಾಮಗಳಿಗ ಮನೆ ಮನೆಗೂ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಕುಟುಂಬಕ್ಕೆ ವರ್ಷದಲ್ಲಿ ೧೦೦ ದಿನಗಳ ಕೆಲಸ, ಗಂಡು ಹೆಣ್ಣಿಗೂ ಸಮಾನ ಕೆಲಸ ಸಮಾನ ಕೂಲಿ ಪ್ರತಿದಿನಕ್ಕೆ ರೂ.೩೪೯ ನೀಡಲಾಗುವುದು. ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷಚೇತನರಿಗೆ ಶೇ.೫೦ ರಷ್ಟು ರಿಯಾಯಿತಿ, ಅಕುಶಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾಂತರಿಗೆ ನಿರ್ವಹಿಸುವ ಕೆಲಸಕ್ಕೆ ಅಥವಾ ಕೂಲಿ ಕಾರ್ಮಿಕರಿಗೆ ಹೆಚ್ಚುವರಿಯಾಗಿ ಶೇ.೧೦ ರಷ್ಟು ಕೆಲಸದ ಪ್ರಮಾಣದಲ್ಲಿರುವ ರಿಯಾಯಿತಿ, ಕಾಮಗಾರಿ ಸ್ಥಳದಲ್ಲಿ ಒದಗಿಸಲಾಗುವ ಸೌಲಭ್ಯ ಬಗ್ಗೆ ತಿಳಿಸಲಾಗುತ್ತದೆ ಎಂದು ಕೆ.ಸಿ.ಅಪ್ಪಣ್ಣ ತಿಳಿಸಿದ್ದಾರೆ.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಯನ್ನು ಅರ್ಹ ಫಲಾನುಭವಿಯ ಕುಟುಂಬ ಜೀವಿತಾವಧಿಯಲ್ಲಿ ಒಟ್ಟು ರೂ.೫ ಲಕ್ಷ ರೂ ಮಿತಿಯೊಳಗೆ ತನಗೆ ಬೇಕಾದ ವೈಯಕ್ತಿಕ ಕಾಮಗಾರಿ ಪಡೆದುಕೊಳ್ಳಲು ಅವಕಾಶವಿದೆ. ಫಲಾನುಭವಿಗಳು ಗ್ರಾಮ ಪಂಚಾಯಿತಿ ಕಚೇರಿ, ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಸಾಮಾಜಿಕ ಅರಣ್ಯ ಇಲಾಖೆಗಳಡಿ ಕಾಮಗಾರಿ ಅನುಷ್ಠಾನಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಕಾಮಗಾರಿಯ ಬೇಡಿಕೆ ಅರ್ಜಿಗಳನ್ನು ಅ.೩೧ ರವರೆಗೆ ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಏಕೀಕೃತ ಸಹಾಯವಾಣಿ ೮೨೭೭೫೦೬೦೦೦ ಅಥವಾ ಸ್ಥಳೀಯ ಗ್ರಾಮ ಪಂಚಾಯಿತಿ ಕಚೇರಿ. ತಾಲೂಕು ಪಂಚಾಯಿತಿ ಕಚೇರಿ ಪೊನ್ನಂಪೇಟೆಯನ್ನು ಸಂಪರ್ಕಿಸುವಂತೆ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಕೆ.ಸಿ.ಅಪ್ಪಣ್ಣ ಪ್ರಕಟಣೆಯಲ್ಲಿ ಕೋರಿದ್ದಾರೆ.