

ಅಥಣಿ: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಕೆಲ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ತಾಲೂಕಿನ ಅಗ್ರಾಣಿ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಮದಬಾವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತಗೊಂಡಿದೆ. ಸೋಲಾಪುರ ಸಮೀಪದ ಜಿನ್ರಾಳ ಗ್ರಾಮದಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬು ನೆಲಕ್ಕುರುಳಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಅಗ್ರಾಣಿ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅಲ್ಲದೆ, ಮುರಗುಂಡಿ ಹಳ್ಳ ಸಹ ಉಕ್ಕಿ ಹರಿಯುತ್ತಿದ್ದು, ಕೆಳಭಾಗದ ಸೇತುವೆ ಜಲಾವೃತಗೊಂಡಿದೆ. ವಿವಿಧ ಗ್ರಾಮಗಳಲ್ಲಿ 12ಕ್ಕೂ ಅಧಿಕ ಮನೆಗಳು ಕುಸಿದಿವೆ. ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಯಾವುದೇ ಪ್ರಾಣಹಾನಿಯಾಗಿಲ್ಲ. ಜನರಿಗೆ ನೆರವು ನೀಡಲು ತಾಲೂಕಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅಥಣಿ ತಹಸೀಲ್ದಾರ್ ದುಂಡಪ್ಪ ಕೋಮಾರ ಮಾಹಿತಿ ನೀಡಿದ್ದಾರೆ.