ಬಾಡಿಗೆ ಮನೆ ಪಡೆಯುವವರ ಮೇಲೆ ನಿಗಾ: ವೀರಕಂಬ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಗ್ರಹ

New Project (39)
Published on

ಬಂಟ್ವಾಳ: ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗಾ ಇಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸೋಮವಾರ ವೀರಕಂಬ-ಮಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರಕಂಬ ಗ್ರಾಮ ಪಂಚಾಯಿತಿಯ ದ್ವಿತೀಯ ಸುತ್ತಿನ ಗ್ರಾಮಸಭೆಯಲ್ಲಿ ವಿಷಯ ಪ್ರಸ್ತಾಪವಾಯಿತು.

ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳಿಂದ ಗ್ರಾಮ ಸ್ವಚ್ಛತೆಗೆ ಅಡ್ಡಿಯಾಗಿದ್ದು, ಪರಿಚಯ ಇಲ್ಲದವರಿಗೆ ಬಾಡಿಗೆ ನೀಡಿರುವುದರಿಂದ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಬಾಡಿಗೆ ಮನೆ ನೀಡುವಾಗ ಸೂಕ್ತ ದಾಖಲಾತಿ ಪಡೆದು ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

ವೀರಕಂಬ ಗ್ರಾಮದಲ್ಲಿ ಆರೋಗ್ಯ ಕೇಂದ್ರ ನಿರ್ಮಿಸಲು ಕಾದಿರಿಸಿದ ಜಾಗದಲ್ಲಿ ಶೀಘ್ರವೇ ಆರೋಗ್ಯ ಉಪಕೇಂದ್ರ ನಿರ್ಮಿಸಬೇಕು. ಗ್ರಾಮದಲ್ಲಿರುವ ಗೋಮಾಳ ಜಾಗವನ್ನು ಗಡಿ ಗುರುತು ಮಾಡಬೇಕು. ಘನ ತ್ಯಾಜ್ಯ ಘಟಕ ಕೂಡಲೇ ಉದ್ಘಾಟಿಸಿ, ರಸ್ತೆ ಬದಿಯಲ್ಲಿ ಕಸ ಎಸೆಯುವವರ ಮೇಲೆ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಆರೋಗ್ಯ, ಮೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಪಶುಸಂಗೋಪನಾ ಇಲಾಖೆ, ತೋಟಗಾರಿಕಾ ಇಲಾಖೆ ವತಿಯಿಂದ ಗ್ರಾಮಸ್ಥರಿಗೆ ಇಲಾಖಾವಾರು ಮಾಹಿತಿ ನೀಡಲಾಯಿತು.

ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರದೀಪ್ ಮಾರ್ಗದರ್ಶನ ನೀಡಿದರು. ಗ್ರಾಮಸ್ಥರು ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಾ, ಉಪಾಧ್ಯಕ್ಷ ಜನಾರ್ದನ ಪೂಜಾರಿ, ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಗ್ರಾಮ ವ್ಯಾಪ್ತಿಯ ಆರೋಗ್ಯ ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು, ಪಂಚಾಯಿತಿ ಸಿಬ್ಬಂದಿ, ಗ್ರಾಮಸ್ಥರು ಭಾಗವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಷ್ಪಾ ಎಂ. ಸ್ವಾಗತಿಸಿದರು. ಕಾರ್ಯದರ್ಶಿ ಸವಿತಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net