

ಬಳ್ಳಾರಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಶ್ರೀ ಹಾನಗಲ್ ಕುಮಾರೇಶ್ವರರ 156ನೇ ಜಯಂತ್ಯುತ್ಸವ, ಗಣ್ಯರಿಗೆ-ಸಾಧಕರಿಗೆ ಸನ್ಮಾನ, ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಸೆ.10ರಂದು ಬಳ್ಳಾರಿ ನಗರದ ಶೆಟ್ರ ಗುರುಶಾಂತಪ್ಪ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ರೇಣುಕ ಪ್ರಸನ್ನ ಹೇಳಿದರು.
ನಗರದ ಬಸವ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಕಲ್ಯಾಣ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದಾರೆ. ಶಾಸಕ ನಾರಾ ಭರತ್‌ರೆಡ್ಡಿ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಆರ್.ರಾಮನಗೌಡ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ನಂತರ ಮಧ್ಯಾಹ್ನ 12 ಗಂಟೆಗೆ ಡಾ.ಎನ್.ತಿಪ್ಪಣ್ಣ ಅವರಿಗೆ ಅಭಿನಂದನೆ ಸಮಾರಂಭ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಸಚಿವರಾದ ಎಂ.ಬಿ.ಪಾಟೀಲ, ಈಶ್ವರ್ ಖಂಡ್ರೆ, ಶರಣಬಸಪ್ಪ ದರ್ಶನಾಪುರ ಇತರರು ಭಾಗವಹಿಸಲಿದ್ದಾರೆ. ಉಜ್ಜಯಿನಿಯ ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಂಜೆ 4 ಗಂಟೆ ವೇಳೆಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚಿನ ಅಂಕ ಪಡೆದ 320 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಳ್ಳಲಿದ್ದಾರೆ ಎಂದರು.
ಬಿಎಸ್‌ವೈ ಸೇರಿ ಐವರಿಗೆ ಪ್ರಶಸ್ತಿ ಪ್ರದಾನ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಜರುಗುತ್ತಿರುವ ಜನಜಾಗೃತಿ ಸಮಾವೇಶದಲ್ಲಿ ಸೆ.10ರ ಸಂಜೆ 5 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಐವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಕೊಟ್ಟೂರಿನ ಲಿಂಗೈಕ್ಯ ಶ್ರೀ ಸಂಗನಬಸವ ಸ್ವಾಮೀಜಿ ಅವರಿಗೆ (ಮರಣೋತ್ತರ) ಕುಮಾರಶ್ರೀ ಪ್ರಶಸ್ತಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರಿಗೆ ಶರಣ ಸಕ್ಕರೆ ಕರಡೀಶ ಪ್ರಶಸ್ತಿ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಸವಶ್ರೀ ಪ್ರಶಸ್ತಿ ಹಾಗೂ ಪಂಪಾಪತಿ ಶಾಸ್ತ್ರಿ ಅವರಿಗೆ ಸಿದ್ದಲಿಂಗೇಶ್ವರ ಭಗವತ್ಪಾದಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ರೇಣುಕ ಪ್ರಸನ್ನ ತಿಳಿಸಿದರು.
ಈ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಶಿವಾನಂದ ಪಾಟೀಲ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದರು.
ರಾಜ್ಯ ಕಾರ್ಯದರ್ಶಿ ಕೆ.ಬಿ.ಶ್ರೀನಿವಾಸ ರೆಡ್ಡಿ, ಆಂಧ್ರ ಮಹಾಸಭಾದ ರಾಜ್ಯಾಧ್ಯಕ್ಷ ದಂಡಿನ ಶಿವಾನಂದ, ಜಿಲ್ಲಾಧ್ಯಕ್ಷ ಚಾನಾಳ್ ಶೇಖರ್, ಕೋರಿ ವಿರೂಪಾಕ್ಷಪ್ಪ, ಪಂಪನಗೌಡ, ಆನೆ ರೂಪಾ ಇತರರಿದ್ದರು.