ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ವೆಂಕಟ ರಾಜಾ ಸೂಚನೆ

12adarshkdga2
Published on

ಮಡಿಕೇರಿ: ನ.೧ ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕಳೆದ ಬಾರಿಯಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ ರಾಜಾ ನಿರ್ದೇಶನ ನೀಡಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈಗಾಗಲೇ ಉಪ ಸಮಿತಿ ರಚಿಸಲಾಗಿದ್ದು, ಅಧಿಕಾರಿಗಳು ತಮ್ಮ ಹಂತದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ, ವೇದಿಕೆ, ಪಥಸಂಚಲನ, ಸಾಂಸ್ಕೃತಿಕ, ಬಹುಮಾನ ವಿತರಣೆ, ಹೀಗೆ ವಿವಿಧ ಉಪ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.


ನಗರದ ಕೋಟೆ ಆವರಣದಿಂದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದವರೆಗೆ ಮೆರವಣಿಗೆ ಏರ್ಪಡಿಸುವುದು. ಮೆರವಣಿಗೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ, ಪಶುಪಾಲನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ನಗರಸಭೆ ವತಿಯಿಂದ ಸ್ತಬ್ಧಚಿತ್ರವನ್ನು ನಿರ್ಮಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.


ನಗರದ ಕೋಟೆ ಆವರಣದಿಂದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದವರೆಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು, ಪ್ರಾಂಶುಪಾಲರು, ಸಿಬ್ಬಂದಿಗಳು, ಪೊಲೀಸ್, ಎನ್‌ಸಿಸಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಗೃಹ ರಕ್ಷಕ ದಳ ಸೇರಿದಂತೆ ಎಲ್ಲರೂ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ ರಾಜಾ ಕೋರಿದರು.


ವಿದ್ಯಾರ್ಥಿಗಳಿಗೆ ಬೆಳಗ್ಗಿನ ಉಪಾಹಾರ ವ್ಯವಸ್ಥೆ ಮಾಡುವುದು, ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ಎಂಜಿನಿಯರಿಂಗ್ ಇಲಾಖೆಗಳು ವೇದಿಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.


ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದವರು, ಸಿಇಟಿ, ನೀಟ್ ಹಾಗೂ ಐಐಟಿ ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವಂತಾಗಬೇಕು. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.


ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಮಾತನಾಡಿ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದರು.


ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಕನ್ನಡ ರಾಜ್ಯೋತ್ಸವ ಸಂಬಂಧ ಹಲವು ಮಾಹಿತಿ ನೀಡಿದರು.


ಐಟಿಡಿಪಿ ಇಲಾಖೆ ಅಧಿಕಾರಿ ಹೊನ್ನೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್.ಮಂಜುನಾಥ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಾಲಸುಬ್ರಮಣ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಲಿಂಗರಾಜ ದೊಡ್ಡಮನಿ, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net