ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆ ಅಲಂಕರಿಸಿ

25kalgi1
ಕಾಳಗಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಬಸವ ಭೀಮಯಾನ ಅಂಗವಾಗಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗರಿಷ್ಠಾಂಕ ಮಲ್ಲ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
Published on

ಕಾಳಗಿ: ಶಿಕ್ಷಣದಿಂದ ಮಾತ್ರ ದೇಶ ಹಾಗೂ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿ ಪಾಲಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಎಂದು ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಕರೆ ನೀಡಿದರು.

ಶ್ರೀ ಅಂಬಾಭವಾನಿ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಬಸವ ಭೀಮಯಾನ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಕನ್ನಡ ವಿಷಯದಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಗರಿಷ್ಠಾಂಕ ಮಲ್ಲ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ನನ್ನ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆ ಅಲಂಕರಿಸಬೇಕು ಎಂದರು.

ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಶ್ರೀಮಂತ ಹೋಳಕರ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಭಾರತ ರತ್ನ ಅಷ್ಟೇ ಅಲ್ಲ, ವಿಶ್ವರತ್ನವಾಗಿದ್ದಾರೆ. ಅವರ ತತ್ವಾದರ್ಶಗಳು ಸರ್ವಕಾಲಿಕವಾಗಿವೆ, ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಬದುಕು ನಡೆಸಬೇಕು ಎಂದು ಸಲಹೆ ನೀಡಿದರು.

ಕಾಳಗಿ ಸರ್ಕಾರಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಗುರುಪ್ರಸಾದ ಹೂಗಾರ, ಮುಖಂಡರಾದ ರಾಜಕುಮಾರ ರಾಜಾಪುರ, ಅವಿನಾಶ ಮೂಲಿಮನಿ ಮಾತನಾಡಿದರು. ರಟಕಲ್ ಹಿರೇಮಠದ ಶ್ರೀ ರೇವಣಸಿದ್ಧ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.

ತಾಪಂ ಮಾಜಿ ಸದಸ್ಯ ಸುಭಾಷ ಕದಂ, ಪ್ರಮುಖರಾದ ನೀಲಕಂಠ ಗುತ್ತೇದಾರ್, ವಿಶ್ವನಾಥ ವನಮಾಲಿ, ಶೇಖರ ಪಾಟೀಲ್, ನಾಗಪ್ಪ ಬೀದಿಮನಿ, ರಾಜು ತಮ್ಮಾಣಿ, ಶಿವರುದ್ರಯ್ಯ ಸಾಲಿಮಠ, ಯಲ್ಲಾಲಿಂಗ ಪಾಟೀಲ್, ರಾಜೇಂದ್ರಬಾಬು ಹೀರಾಪುರ, ಸುಧಾರಾಣಿ ಚಿದ್ರಿ ಇತರರಿದ್ದರು. ಸತೀಶ್ಚಂದ್ರ ಸುಲೇಪೇಟ ಸ್ವಾಗತಿಸಿದರು. ಕಸಾಪ ತಾಲೂಕು ಅಧ್ಯಕ್ಷ ಸಂತೋಷ ಕುಡ್ಡಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಬಾಬರ್ ಪಟೇಲ್ ನಿರೂಪಣೆ ಮಾಡಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net