

ಉಡುಪಿ: ಮಲ ಹೊರುವ ಪದ್ಧತಿ ನಿರ್ಬಂಧಿಸಲಾಗಿದ್ದು, ಅಂತಹ ಉಲ್ಲಂಘನೆ ಪ್ರಕರಣ ಕಂಡುಬಂದಲ್ಲಿ ಸ್ಥಳೀಯ ಸಂಸ್ಥೆಯ ಪರಿಶೀಲನಾ ಅಧಿಕಾರಿಗಳು ದೂರು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಪ್ರಕರಣದ ದೂರು ಬಂದ ತಕ್ಷಣವೇ ನಗರ, ಸ್ಥಳೀಯ ಸಂಸ್ಥೆ ಹಾಗೂ ಗ್ರಾಪಂ ವ್ಯಾಪ್ತಿಯ ಪರಿಶೀಲನಾ ಅಧಿಕಾರಿಗಳು ತುರ್ತಾಗಿ ಸ್ಥಳ ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ಮನೆ, ಕಂಪನಿಗಳು, ಆಸ್ಪತ್ರೆ, ಅಪಾರ್ಟ್ಮೆಂಟ್ ಸೇರಿದಂತೆ ಇನ್ನಿತರ ಕಟ್ಟಡಗಳಲ್ಲಿ ಮ್ಯಾನ್ಹೋಲ್, ಸೆಪ್ಟಿಕ್ ಟ್ಯಾಂಕ್, ತೆರೆದ ಚರಂಡಿ, ಪಿಟ್ ಗುಂಡಿ ಕಟ್ಟಿಕೊಂಡಿರುತ್ತಾರೆ. ಅವುಗಳನ್ನು ಸ್ವಚ್ಛಗೊಳಿಸಲು ಅನುಕೂಲವಾಗುವಂತೆ ನಗರ ವ್ಯಾಪ್ತಿಯಲ್ಲಿ ಸಹಾಯವಾಣಿ ಸಂಖ್ಯೆ 14420 ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊ. 9480985555 ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ಸಂಖ್ಯೆ ಪ್ರದರ್ಶಿಸಬೇಕು ಎಂದರು.
ಸಭೆಯಲ್ಲಿ ಜಿಪಂ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣಕುಮಾರ್ ಕೆ., ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ ಹಾಗೂ ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ಗಳಿಗೆ ಅಥವಾ ಆ ಕೆಲಸ ಮಾಡುವವರು ಮೃತಪಟ್ಟಿದ್ದರೆ ಅವರ ಕುಟುಂಬದವರಿಗೆ ಗುರುತಿನ ಚೀಟಿ ವಿತರಿಸಬೇಕು. ಒಂದು ಬಾರಿ ನಗದು ಸಹಾಯ, ಮನೆ, ನಿವೇಶನ, ಶಿಕ್ಷಣ, ವಿದ್ಯಾರ್ಥಿ ವೇತನ, ಉದ್ಯೋಗ, ಸಾಲ ಸೌಲಭ್ಯ ಇತ್ಯಾದಿ ಪುನರ್ವಸತಿ ಕಲ್ಪಿಸಬೇಕು. ವಸತಿ ಶಾಲೆಗಳಲ್ಲಿ ಅವರ ಹಾಗೂ ಪೌರ ಕಾರ್ಮಿಕರ ಮಕ್ಕಳಿಗೆ ಶೇ. 5 ನೇರ ಪ್ರವೇಶ ಕಲ್ಪಿಸಲಾಗುವುದು. ಇದರ ಬಗ್ಗೆ ಅವರಿಗೆ ಮಾಹಿತಿ ನೀಡಬೇಕು. ಪೌರ ಕಾರ್ಮಿಕರು ಹಾಗೂ ಇನ್ನಿತರ ಕೆಲಸಗಾರರಿಗೆ ಕಾಲಕಾಲಕ್ಕೆ ವೇತನ ಪಾವತಿಸಬೇಕು. ಈಗಾಗಲೇ 155 ಪೌರ ಕಾರ್ಮಿಕರನ್ನು ನೇಮಿಸಲಾಗಿದ್ದು, ಅವರಲ್ಲಿ 3 ಜನರಿಗೆ ಈವರೆಗೆ ನೇಮಕಾತಿ ಆಗಿಲ್ಲ. ಪರಿಶೀಲಿಸಿ ಎಂದು ಡಿಸಿ ವಿದ್ಯಾಕುಮಾರಿ ಸೂಚನೆ ನೀಡಿದರು.
ಪೌರ ಕಾರ್ಮಿಕರು ಕಡ್ಡಾಯವಾಗಿ ಸುರಕ್ಷತಾ ಪರಿಕರ ಧರಿಸಿಯೇ ಕಾರ್ಯ ನಿರ್ವಹಿಸಬೇಕು. ಆದರೆ ಅವುಗಳ ಬಳಕೆ ಮಾಡದಿರುವುದು ಕಂಡುಬರುತ್ತಿದೆ. ಅವರ ಆರೋಗ್ಯ ದೃಷ್ಟಿಯಿಂದ ಪ್ರತಿ ಮೂರು ತಿಂಗಳಿಗೊಮ್ಮೆ ತಪ್ಪದೇ ತಪಾಸಣೆ ಮಾಡಬೇಕು. ಶೇ. 24.10 ಮೀಸಲು ಅನುದಾನದಲ್ಲಿ ಶೇ. 20 ಅನುದಾನವನ್ನು ಪೌರ ಕಾರ್ಮಿಕರ ಕಲ್ಯಾಣಕ್ಕಾಗಿಯೇ ಬಳಸಬೇಕು. ಡಾ.ಕೆ.ವಿದ್ಯಾಕುಮಾರಿ. ಜಿಲ್ಲಾಧಿಕಾರಿ, ಉಡುಪಿ